
ಬೆಂಗಳೂರು, ಮಾರ್ಚ್ 9: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರಗೊಂಡಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಪರಿಣಾಮ ಬೀರುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರಿನ (Bangalore) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಮಾರ್ಚ್ 9 ರಂದೂ ಸಹ ಹಲವು ವಿಮಾನಗಳ ಹಾರಾಟ ರದ್ದುಗೊಂಡಿದೆ. ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಮತ್ತು ಅಲ್ಲಿಂದ ಆಗಮಿಸಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ವಾಯುಪ್ರದೇಶದ ಅನಿಶ್ಚಿತತೆ ಹಿನ್ನೆಲೆಯಲ್ಲಿ ಏರ್‌ಲೈನ್ ಕಂಪನಿಗಳು ಈ ನಿರ್ಧಾರ ಕೈಗೊಂಡಿವೆ.
ಅಧಿಕೃತ ಮಾಹಿತಿ ಪ್ರಕಾರ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧ ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ 11 ವಿಮಾನಗಳ ಹಾರಾಟ ರದ್ದಾಗಿದೆ. ಅದೇ ರೀತಿ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 10 ವಿಮಾನಗಳೂ ರದ್ದುಗೊಂಡಿವೆ.
ಒಟ್ಟು 21 ವಿಮಾನಗಳ ಹಾರಾಟ ರದ್ದಾದ ಕಾರಣ, ಪ್ರಯಾಣಿಕರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ವಿಮಾನ ರದ್ದಾದ ಬಗ್ಗೆ ಸಂಬಂಧಿತ ಏರ್‌ಲೈನ್ ಸಂಸ್ಥೆಗಳು ಪ್ರಯಾಣಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.
ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವುದರಿಂದ ಮುಂದಿನ ದಿನಗಳಲ್ಲಿಯೂ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಧ್ಯಪ್ರಾಚ್ಯ ದೇಶಗಳತ್ತ ಪ್ರಯಾಣಿಸುವವರು ತಮ್ಮ ವಿಮಾನಗಳ ಸ್ಥಿತಿಯನ್ನು ಮುಂಚಿತವಾಗಿ ಪರಿಶೀಲಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಹೆಚ್ಚುತ್ತಿರುವ ಇರಾನ್-ಇಸ್ರೇಲ್ ಸಂಘರ್ಷ ಮತ್ತು ಪಶ್ಚಿಮ ಏಷ್ಯಾದಲ್ಲಿ ವಾಯು ಮಾರ್ಗಗಳ ಮುಚ್ಚುವಿಕೆಯಿಂದಾಗಿ ಕಳೆದ ವಾರದಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ತೀವ್ರವಾಗಿ ಅಸ್ತವ್ಯಸ್ತಗೊಂಡಿವೆ. ಮಾರ್ಚ್ 1 ರಿಂದ ಮಾರ್ಚ್ 9 ರ ನಡುವೆ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ 200 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ. ವಾರದ ಆರಂಭದಲ್ಲಿ ಅತ್ಯಂತ ಗಮನಾರ್ಹ ಅಡಚಣೆಗಳು ಸಂಭವಿಸಿದ್ದವು. ಮಾರ್ಚ್ 2 ರಂದು 72 ವಿಮಾನ ಹಾರಾಟ ಸ್ಥಗಿತ ಮತ್ತು ಮಾರ್ಚ್ 4 ರಂದು 34 ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿತ್ತು.
ಇದನ್ನೂ ಓದಿ: ದುಬೈನಲ್ಲಿ ಸಿಲುಕಿದ್ದ ಮತ್ತಷ್ಟು ಕನ್ನಡಿಗರು ತಾಯ್ನಾಡಿಗೆ ವಾಪಸ್: ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು
ವಿಮಾನಯಾನ ಸಂಸ್ಥೆಗಳು ಸೀಮಿತವಾಗಿ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ಪ್ರಯತ್ನಿಸಿದ್ದರೂ, ಮಾರ್ಚ್ 9 ರಂದು ಮತ್ತೆ 21 ವಿಮಾನಗಳನ್ನು ರದ್ದುಪಡಿಸಲಾಗಿದೆ. ಇದು ಸಾವಿರಾರು ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.