IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ಸರ್ಫರಾಝ್ ಖಾನ್ (Sarfaraz Khan) ಬರೆದಿದ್ದಾರೆ. ಅದು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸ್ಫೋಟಕ ಹಾಫ್ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್ಗಳು.
ಈ ಬೃಹತ್ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 10 ರನ್ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಆರ್ಸಿಬಿ ಬೌಲರ್ಗಳನ್ನು ದಂಡಿಸಿದ ಸರ್ಫರಾಝ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಪವರ್ಪ್ಲೇನಲ್ಲೇ ಅರ್ಧಶತಕ ಪೂರೈಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಸರ್ಫರಾಝ್ ಖಾನ್ ತಮ್ಮದಾಗಿಸಿಕೊಂಡರು. ಅಂದರೆ ಐಪಿಎಲ್ನಲ್ಲಿ 4ನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಕಣಕ್ಕಿಳಿದು ಮೊದಲ 6 ಓವರ್ಗಳಲ್ಲಿ ಯಾವುದೇ ಬ್ಯಾಟರ್ ಅರ್ಧಶತಕ ಪೂರೈಸಿರಲಿಲ್ಲ.
2023 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಪರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ತಿಲಕ್ ವರ್ಮಾ ಪವರ್ಪ್ಲೇನಲ್ಲೇ 43 ರನ್ಗಳಿಸಿದ್ದು ಈವರೆಗಿನ ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಇದೀಗ ಪವರ್ಪ್ಲೇನಲ್ಲೇ ಪವರ್ಫುಲ್ ಬ್ಯಾಟಿಂಗ್ ಪ್ರದರ್ಶಿಸಿ ಸರ್ಫರಾಝ್ ಖಾನ್ ಅರ್ಧಶತಕದೊಂದಿಗೆ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.




