ಬೆಂಗಳೂರಿನಲ್ಲೂ ಇಂದೂ ಇರಲಿದೆ ವರುಣಾರ್ಭಟ! Image Credit source: google Gemini
ಬೆಂಗಳೂರು, ಮೇ 02: ರಾಜ್ಯದಲ್ಲಿ ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ ಕಾಣಸಿಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ (Karnataka Weather) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ರಾಜಧಾನಿಯಲ್ಲಿ ಮಳೆಯ ಅಲರ್ಟ್!
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಾರ್ಭಟವಿದ್ದು, ಕೆಲವೆಡೆ ಹೀಟ್ ವೇವ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಕಲ್ಬುರ್ಗಿ, ರಾಯಚೂರು, ಯಾದಗಿರಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮಳೆಯ ಅವಾಂತರ!
ಬುಧವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಮಳೆ ಹಲವರನ್ನು ಬಲಿ ಪಡೆದಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
