ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ!
ಬೆಂಗಳೂರು, ಮೇ 11: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather) ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಖ್ಯಾಂಶಗಳು
- ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ
- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ
- ಕೊಡಗು ಸೇರಿದಂತೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಎಲ್ಲೆಲ್ಲಿ ಮಳೆ?
ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್
ಮೇ 9, 10ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
