ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ!
ಬೆಂಗಳೂರು, ಏಪ್ರಿಲ್ 15: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ ಶುಷ್ಕ (Weather Forecast) ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಒಟ್ಟಾರೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಎಲ್ಲೆಲ್ಲಿ ಯೆಲ್ಲೋ ಅಲರ್ಟ್?
ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಹೆಚ್ಚಾಗಿರಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ಎಲ್ಲೆಲ್ಲಿ ಹೀಟ್ ವೇವ್, ಒಣ ಹವೆ?
ಕರಾವಳಿಯಲ್ಲಿಂದು ಬಿಸಿ ವಾತಾವರಣದ ಜೊತೆ ಒಣ ಹವೆಯೂ ಇರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.
ಉಷ್ಣಾಘಾತದಿಂದ ರಕ್ಷಣೆ ಹೇಗೆ?
ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
