ಬೆಂಗಳೂರು, (ಮೇ 21): ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ಯುವ ಕಾಂಗ್ರೆಸ್ (youth Congress Protest )ಬೃಹತ್ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿತು. ಇಂದು )ಮೇ 21) ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಬೆಂಬಲಿಸಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಯುವ ಕಾಂಗ್ರೆಸ್ ಕಾರ್ತಕರ್ತರು, ಫ್ರೀಡಂಪಾರ್ಕ್ನಿಂದ ತೆರಳಿ ಲೋಕಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.
ಇತ್ತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಸ್ನಲ್ಲಿ ಕರೆದೊಯ್ಯುತ್ತಿದ್ದರೆ, ಇನ್ನೊಂದೆಡೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ನ ಹಿರಿಯ ನಾಯಕರು ಹೋಟೆಲ್ಗೆ ತೆರಳಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಫ್ರೀಡಂಪಾರ್ಕ್ನಿಂದ ಶಾಂಗ್ರಿಲಾ ಹೋಟೆಲ್ಗೆ ತೆರಳಿದರು.