ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಪ್ರತ್ಯೇಕ ಸಭೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ, ಮುಂದಿನ ನಡೆ ಬಗ್ಗೆ ಚರ್ಚೆ – Kannada News | Kolar Chikkaballapur Congress MLAs Hold Meeting Over Karnataka Cabinet Berths Denial

ಕೋಲಾರ, ಆಗಸ್ಟ್ 4: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ (Karnataka Cabinet Expansion) ಕೋಲಾರ (Kolar) ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಯಾವುದೇ ಶಾಸಕರಿಗೂ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿ, ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಲು ಮುಂದಾಗಿದ್ದಾರೆ. ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ಚಿಂತಾಮಣಿ ಶಾಸಕ ಎಂ.ಸಿ. ಸುಧಾಕರ್, ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸೇರಿದಂತೆ ಏಳು ಶಾಸಕರು ಭಾಗವಹಿಸುವ ಸಾಧ್ಯತೆ ಇದೆ. ವಿಧಾನಪರಿಷತ್ ಸದಸ್ಯರಾದ ಎಂ.ಎಲ್. ಅನಿಲ್ ಕುಮಾರ್ ಹಾಗೂ ನಜೀರ್ ಅಹಮದ್ ಬಾಗಿ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಕೆಜಿಎಫ್ ಶಾಸಕಿ ರೂಪಕಲಾ ಅವರು ಸಭೆಯಿಂದ ದೂರ ಉಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಎರಡು ಜಿಲ್ಲೆಗಳ ಏಳು ಶಾಸಕರ ಪೈಕಿ ಯಾರಿಗೂ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ, ಪಕ್ಷದೊಳಗೆ ತಮ್ಮ ಮುಂದಿನ ನಡೆ ಏನಾಗಬೇಕು ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ

ಕಾಂಗ್ರೆಸ್ ಹೈಕಮಾಂಡ್ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಕಡೆಗಣಿಸಿದೆ ಎಂಬ ಅಸಮಾಧಾನ ಶಾಸಕರಲ್ಲಿ ವ್ಯಕ್ತವಾಗಿದೆ. ಸರ್ಕಾರದ ಮೊದಲ ಅವಧಿಯಲ್ಲಿ ಚಿಂತಾಮಣಿ ಶಾಸಕ ಎಂ.ಸಿ. ಸುಧಾಕರ್ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಎರಡನೇ ಅವಧಿಯಲ್ಲಿ ಕೋಲಾರ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆ ಇತ್ತು ಎನ್ನಲಾಗಿತ್ತು. ಆದರೆ ಸಂಪುಟ ವಿಸ್ತರಣೆಯಲ್ಲಿ ಎರಡೂ ಜಿಲ್ಲೆಗಳಿಂದ ಯಾರಿಗೂ ಸ್ಥಾನ ಸಿಗದಿರುವುದು ಶಾಸಕರಿಗೆ ನಿರಾಸೆ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡಬೇಕೇ ಅಥವಾ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಮನವೊಲಿಸಬೇಕೇ ಎಂಬ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬರಲಿದೆ ಎನ್ನಲಾಗಿದೆ.

ಕೆ.ಎಚ್. ಮುನಿಯಪ್ಪ ವಿರುದ್ಧ ನಾರಾಯಣಸ್ವಾಮಿ ಆರೋಪ

ಸಚಿವ ಸ್ಥಾನ ಕೈತಪ್ಪಲು ಸಚಿವ ಕೆ.ಎಚ್. ಮುನಿಯಪ್ಪ ಅವರೇ ಕಾರಣ ಎಂಬ ಗಂಭೀರ ಆರೋಪವನ್ನು ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾಡಿದ್ದಾರೆ. ಕೊನೆಯ ಕ್ಷಣದವರೆಗೂ ತಮಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು ಎಂದು ಹೇಳಿರುವ ಅವರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಆಯ್ಕೆಯಾಗಿರುವ ಏಕೈಕ ಬಲಗೈ ಸಮುದಾಯದ ಶಾಸಕ ತಾವು ಎಂದು ಉಲ್ಲೇಖಿಸಿದ್ದಾರೆ.

ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ ತಮ್ಮ ನಿರೀಕ್ಷೆ ಹುಸಿಯಾಗಿದೆ ಎಂದು ನಾರಾಯಣಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ರಾಜೀನಾಮೆ ಎಚ್ಚರಿಕೆ, ಬೆಂಬಲಿಗರ ಪ್ರತಿಭಟನೆ

ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಮೋಸ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ನೇರ ಆರೋಪ ಮಾಡಿದ್ದು, ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನೊಳಗಿನ ಅಸಮಾಧಾನ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *