
ಚಿಕ್ಕಬಳ್ಳಾಪುರ, ಮೇ 31: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ಭೀಕರ ಸರಣಿ ಅಪಘಾತ (Accident) ಸಂಭವಿಸಿದ್ದು, ಆಟೋದಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು?
ಥಾರ್ ಕಾರು, ಆಟೋ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ವೇಗವಾಗಿ ಬಂದ ಥಾರ್ ಕಾರು ತನ್ನ ಮುಂದೆ ಚಲಿಸುತ್ತಿದ್ದ ಆಟೋಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಕ್ಯಾಂಟರ್ ವಾಹನಕ್ಕೆ ಅಪ್ಪಳಿಸಿದೆ. ಪರಿಣಾಮವಾಗಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ: ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!
ಇನ್ನು ಅಪಘಾತದಲ್ಲಿ ಗಾಯಗೊಂಡ ಹತ್ತಕ್ಕೂ ಹೆಚ್ಚು ಜನರನ್ನು ತಕ್ಷಣ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.