ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ – Kannada News

ನವದೆಹಲಿ, ಜೂನ್ 9: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ತೀವ್ರ ಆಂತರಿಕ ಬಿಕ್ಕಟ್ಟು ಮತ್ತು ಸಂಸದರ ಬಂಡಾಯದ ವಾತಾವರಣ ನಿರ್ಮಾಣವಾಗಿದೆ. ಇದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ದೊಡ್ಡ ರಾಜಕೀಯ ಹೊಡೆತವಾಗಿದೆ. ಇದರ ಬೆನ್ನಲ್ಲೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನವದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ ವಿರೋಧ ಪಕ್ಷಗಳ ‘ಇಂಡಿಯ’ (INDIA) ಒಕ್ಕೂಟದ ಪ್ರಮುಖ ಸಭೆಯ ಮರುದಿನವೇ ಈ ಭೇಟಿ ನಡೆದಿರುವುದು ರಾಷ್ಟ್ರ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಟಿಎಂಸಿಯಲ್ಲಿನ ರಾಜಕೀಯ ಬೆಳವಣಿಗೆಗಳ ನಡುವೆ, ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಈ ಇಬ್ಬರು ಹಿರಿಯ ನಾಯಕಿಯರ ಸಭೆ ನಡೆದಿದೆ. ಸೋಮವಾರ ನಡೆದ ಇಂಡಿಯ ಒಕ್ಕೂಟದ ಸಭೆಯಲ್ಲಿ ಸೋನಿಯಾ ಗಾಂಧಿ ಮತ್ತು ಮಮತಾ ಬ್ಯಾನರ್ಜಿ ಪರಸ್ಪರ ಆಲಂಗಿಸಿಕೊಂಡು ಆತ್ಮೀಯತೆ ಪ್ರದರ್ಶಿಸಿದ್ದ ವಿಡಿಯೋಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇತ್ತೀಚಿನ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಸೋಲು ಕಂಡ ನಂತರ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಆಡಳಿತ ಕೊನೆಗೊಂಡಿದ್ದು, ರಾಜ್ಯದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರ ಹಿಡಿದಿದೆ.

ಇದನ್ನೂ ಓದಿ: ಲೋಕಸಭೆಯತ್ತ ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಹೆಜ್ಜೆ, ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ

ಈ ಹಿನ್ನಲೆಯಲ್ಲಿ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ಒಟ್ಟಾಗಿ ಕೆಲಸ ಮಾಡುವ ಮತ್ತು ಸಂಸತ್ತಿನಲ್ಲಿ ಜಂಟಿ ಕಾರ್ಯತಂತ್ರ ರೂಪಿಸುವ ಕುರಿತು ಇಬ್ಬರೂ ನಾಯಕಿಯರು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಒಕ್ಕೂಟದ ಬಲವರ್ಧನೆಗೆ ಯತ್ನಿಸುತ್ತಿದ್ದರೆ, ಇತ್ತ ಅವರ ಸ್ವಂತ ಪಕ್ಷದಲ್ಲೇ ಭಾರಿ ಬಂಡಾಯ ಭುಗಿಲೆದ್ದಿದೆ. ಟಿಎಂಸಿಯ ಪ್ರಮುಖ ನಾಯಕಿ ಕಾಕೋಲಿ ಘೋಷ್ ದಸ್ತಿದಾರ್ ಸೇರಿದಂತೆ ಸುಮಾರು 20 ಲೋಕಸಭಾ ಸಂಸದರು ದೆಹಲಿಯಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ತಾವು ಟಿಎಂಸಿ ನಾಯಕತ್ವದಿಂದ ಬೇಸತ್ತಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ಎನ್‌ಡಿಎ ಒಕ್ಕೂಟವನ್ನು ಸೇರಲು ಅಥವಾ ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳಲು ಅವಕಾಶ ಕೋರಿದ್ದಾರೆ.

ಬಂಡಾಯ ಸಂಸದರಾದ ಪ್ರಸೂನ್ ಬ್ಯಾನರ್ಜಿ, ಶತಬ್ದಿ ರಾಯ್ ಸೇರಿದಂತೆ ಹಲವರು ಕೇಂದ್ರ ಸಚಿವ ಹಾಗೂ ಬಂಗಾಳದ ಬಿಜೆಪಿ ಉಸ್ತುವಾರಿ ಭೂಪೇಂದ್ರ ಯಾದವ್ ಅವರ ನಿವಾಸದಲ್ಲಿ ಸಭೆ ನಡೆಸಿರುವುದು ಟಿಎಂಸಿಗೆ ದೊಡ್ಡ ಆಘಾತ ನೀಡಿದೆ. ಇದೇ ಬಿಕ್ಕಟ್ಟಿನ ನಡುವೆ ಸೋಮವಾರವಷ್ಟೇ ಟಿಎಂಸಿ ಹಿರಿಯ ನಾಯಕ ಸುಖೇಂದು ಶೇಖರ್ ರಾಯ್ ತಮ್ಮ ರಾಜ್ಯಸಭಾ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ.

ಇದನ್ನೂ ಓದಿ: ಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ಶಾಕ್; ಟಿಎಂಸಿಯಿಂದ ಉಚ್ಚಾಟಿತರಾಗಿದ್ದ ರಿತಬ್ರತಾ ಬ್ಯಾನರ್ಜಿ ಈಗ ಪ್ರತಿಪಕ್ಷ ನಾಯಕ!

ನಿನ್ನೆ ನಡೆದ 23 ವಿರೋಧ ಪಕ್ಷಗಳ ಒಕ್ಕೂಟವಾದ ಇಂಡಿಯ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಮತ್ತು ಮಮತಾ ಬ್ಯಾನರ್ಜಿ ಭಾಗವಹಿಸಿದ್ದರು. ಸಭೆಯಲ್ಲಿ ಮುಖ್ಯವಾಗಿ 5 ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ದೇಶದ ಆರ್ಥಿಕ ಬಿಕ್ಕಟ್ಟು ಮತ್ತು ಹಣದುಬ್ಬರ ತಡೆಗೆ ಸರ್ವಪಕ್ಷ ಸಭೆ ಕರೆಯಲು ಕೇಂದ್ರಕ್ಕೆ ಒತ್ತಾಯ ಮಾಡಲು ನಿರ್ಧರಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿನ ಗೊಂದಲಗಳಿಗೆ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಲು ಚರ್ಚಿಸಲಾಗಿದೆ. ಚುನಾವಣಾ ಅಕ್ರಮಗಳ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಜಂಟಿ ಪತ್ರ ಬರೆಯಲು ನಿರ್ಧರಿಸಲಾಗಿದೆ.

ಪ್ರತಿ 2 ತಿಂಗಳಿಗೊಮ್ಮೆ ಸಮನ್ವಯ ಸಭೆ ನಡೆಸಲು ನಿರ್ಧರಿಸಲಾಗಿದೆ. ಸಂಸತ್ತಿನ ಅಧಿವೇಶನದಲ್ಲಿ ಪ್ರತಿದಿನ ಒಟ್ಟಾಗಿ ಆಡಳಿತ ಪಕ್ಷವನ್ನು ಎದುರಿಸಲು ನಿರ್ಧರಿಸಲಾಗಿದೆ. ಆಮ್ ಆದ್ಮಿ ಪಾರ್ಟಿ (AAP) ಒಕ್ಕೂಟದಿಂದ ಹೊರಬಂದಿರುವುದು ಮತ್ತು ತಮಿಳುನಾಡು ಚುನಾವಣೆಯ ಬಳಿಕ ಡಿಎಂಕೆ ಈ ಸಭೆಯಿಂದ ಸಂಪೂರ್ಣವಾಗಿ ದೂರ ಉಳಿದಿರುವುದು ಒಕ್ಕೂಟದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಎತ್ತಿ ತೋರಿಸಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮಮತಾ ಬ್ಯಾನರ್ಜಿ ಅವರು ಸೋನಿಯಾ ಗಾಂಧಿಯ ಬೆಂಬಲ ಕೋರಿರುವುದು ಪಶ್ಚಿಮ ಬಂಗಾಳ ಹಾಗೂ ಕೇಂದ್ರ ರಾಜಕಾರಣದಲ್ಲಿ ಹೊಸ ಸಮೀಕರಣಗಳಿಗೆ ನಾಂದಿ ಹಾಡಬಹುದು ಎನ್ನಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *