ರಾಯಚೂರು, ಜುಲೈ 30: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಹೀಗಾಗಿ ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶ್ರೀಮಠವು ಹೊಸ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದೆ. ತುಂಗಭದ್ರಾ ನದಿಯಿಂದ ಮಳೆಗಾಲದಲ್ಲಿ ಹರಿದುಬರುವ ಹೆಚ್ಚುವರಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳುವ ಉದ್ದೇಶದಿಂದ ಶ್ರೀಮಠದ 40 ಎಕರೆ ಪ್ರದೇಶದಲ್ಲಿ ಬೃಹತ್ ‘ಇಂಪೌಂಡಿಂಗ್ ರಿಸರ್ವೈಯರ್’ ನಿರ್ಮಿಸಲಾಗುತ್ತಿದ್ದು, ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿದರು. ಹೆಚ್‌ಎಎಲ್ ಸಂಸ್ಥೆಯ ಸಿಎಸ್‌ಆರ್ ನಿಧಿಯ 50 ಕೋಟಿ ರೂ ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಮುಂಬರುವ 2057ರ ವರೆಗೆ ಅಂದರೆ ಸುಮಾರು 30 ವರ್ಷಗಳ ಕಾಲ ಮಂತ್ರಾಲಯದಲ್ಲಿ ಕುಡಿಯುವ ನೀರಿನ ಅಭಾವ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಶ್ರೀಗಳೊಂದಿಗೆ ಹೆಚ್‌ಎಎಲ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕೆ. ರವಿ ಹಾಗೂ ಮಠದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.