IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ (Slow Over-rate) ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಪ್ಲೇಯಿಂಗ್ ಇಲೆವೆನ್ನ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ.
ಏಪ್ರಿಲ್ 4 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ನಿಗದಿತ ಸಮಯದೊಳಗೆ ಓವರ್ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವಾಗಿದ್ದು, ಹೀಗಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.
ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಇದೀಗ ಮತ್ತದೇ ತಪ್ಪು ಪುನರಾವರ್ತಿಸಿದ ಕಾರಣ 24 ಲಕ್ಷ ರೂ. ದಂಡ ವಿಧಿಸಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನಲ್ಲಿದ್ದ (ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ) ಪ್ರತಿಯೊಬ್ಬ ಆಟಗಾರನಿಗೂ 6 ಲಕ್ಷ ರೂಪಾಯಿ ಅಥವಾ ಅವರ ಪಂದ್ಯದ ಸಂಭಾವನೆಯ 25% ರಷ್ಟು ದಂಡ ಹಾಕಲಾಗಿದೆ.
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ. ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ ಎಲ್ಲಾ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕನಿಗೆ ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.
ಇನ್ನು ನಾಯಕನ ಖಾತೆಯಲ್ಲಿ ಡಿಮೆರಿಟ್ ಪಾಯಿಂಟ್ಗಳು ಒಂದು ನಿರ್ದಿಷ್ಟ ಮಿತಿಯನ್ನು (ಉದಾಹರಣೆಗೆ 3 ವರ್ಷಗಳಲ್ಲಿ 4 ಪಾಯಿಂಟ್ಸ್) ಮೀರಿದಾಗ ಮಾತ್ರ ಪಂದ್ಯದ ನಿಷೇಧ ಹೇರಬಹುದು. ಅಂದರೆ ಅತ್ಯಂತ ಗಂಭೀರ ಅಥವಾ ಅತಿ ಹೆಚ್ಚು ಬಾರಿ ತಪ್ಪು ಮಾಡಿದಾಗ ಮಾತ್ರ ನಾಯಕನನ್ನು ಒಂದು ಪಂದ್ಯದಿಂದ ನಿಷೇಧಿಸಲಾಗುತ್ತದೆ.
