ಬೆಂಗಳೂರು, ಜೂನ್ 20: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವುದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿಸಲಿದೆ ಎಂಬ ವದಂತಿಗಳ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಉಂಟಾಗುವ ಸಾಧ್ಯತೆಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಯಾವುದೇ ಕಾರಣಕ್ಕೂ ಮೈತ್ರಿ ಮುರಿಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಹಿರಿಯೂರು ಕ್ಷೇತ್ರದ ಮುಂಬರುವ ವಿಧಾನಸಭಾ ಉಪಚುನಾವಣೆ ಕುರಿತು ಪಕ್ಷದ ಮುಖಂಡರ ಸಭೆಯ ನಂತರ ಮಾತನಾಡಿದ ಕುಮಾರಸ್ವಾಮಿ, ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಪಕ್ಷದ ಬಲವನ್ನು ಪರೀಕ್ಷಿಸಲು ಮಾತ್ರ. ಇದು ಮುಂದಿನ ದಿನಗಳಲ್ಲಿ ಪಕ್ಷ ಯಾವ ರೀತಿ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಪರೀಕ್ಷೆಯಾಗಿತ್ತು ಎಂದರು. ಪರಿಷತ್ ಚುನಾವಣೆಗೆ ಅಭ್ಯರ್ಥಿಯನ್ನು ನಿಲ್ಲಿಸುವ ಮುನ್ನವೇ ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ್ ಮತ್ತು ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಲಾಗಿತ್ತು. ಅವರ ಸಮ್ಮತಿಯ ಮೇರೆಗೆ ಅಭ್ಯರ್ಥಿಯನ್ನು ಹಾಕಲಾಗಿತ್ತು ಎಂದು ತಿಳಿಸಿದರು. ಅಡ್ಡಮತದಾನದ ವಿಚಾರಕ್ಕೆ ಸಂಬಂಧಿಸಿದಂತೆ ಮೂವರು ಸದಸ್ಯರ ತಂಡ ಸಿ.ಟಿ.ರವಿ ನೇತೃತ್ವದಲ್ಲಿ ಸತ್ಯಶೋಧನೆ ನಡೆಸುತ್ತದೆ. ನಾನು ಸಹ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ಗೆ ಪರಿಷತ್ ಚುನಾವಣೆಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಅವರು ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
