ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಅಭ್ಯರ್ಥಿ ಎನ್ನಲಾದ ಸುವೇಂದು ಅಧಿಕಾರಿ (Suvendu Adhikari) ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಈ ಘಟನೆಯು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಪ್ರಮುಖ ಮುಖ್ಯಾಂಶಗಳು
- ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ.
- ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿನ ದಾಳಿ.
- ಫಲಿತಾಂಶದ ನಂತರ ರಾಜ್ಯಾದ್ಯಂತ ನಡೆದ ಹಿಂಸಾಚಾರದಲ್ಲಿ ಇದುವರೆಗೆ 200ಕ್ಕೂ ಹೆಚ್ಚು ಎಫ್‌ಐಆರ್ ದಾಖಲು.
ಅಧಿಕಾರಿ ಪಿಎ ಮೇಲೆ ದಾಳಿ ನಡೆದಿದ್ದು ಹೇಗೆ?
ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 10.20ಕ್ಕೆ ಚಂದ್ರನಾಥ್ ರಥ್ ಅವರು ಬಾರಾಸಾತ್‌ನಲ್ಲಿರುವ ತಮ್ಮ ಮನೆಗೆ ಕಾರಿನಲ್ಲಿ ಮರಳುತ್ತಿದ್ದರು. ದೋಹಾರಿಯಾ ಪ್ರದೇಶದಲ್ಲಿ ಮೋಟಾರ್ ಸೈಕಲ್‌ಗಳಲ್ಲಿ ಬಂದ ಅಪರಿಚಿತರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಂದ್ರನಾಥ್ ಹತ್ಯೆ ಮಾಡಿದವರ ಸುಮ್ಮನೆ ಬಿಡಲ್ಲ: ಸುವೇಂದು ಅಧಿಕಾರಿ
ಆಪ್ತನ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸುವೇಂದು ಅಧಿಕಾರಿ ಆಸ್ಪತ್ರೆಗೆ ಧಾವಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಪ್ರತಿಕ್ರಿಯಿಸಿ, ‘ಇದು ನಿರೀಕ್ಷಿತವಾಗಿತ್ತು. ಟಿಎಂಸಿ ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತದೆ ಎಂದು ನಾವು ಭಾವಿಸಿರಲಿಲ್ಲ. ವಿರೋಧ ಪಕ್ಷದ ನಾಯಕನ ಆಪ್ತ ಸಹಾಯಕನನ್ನೇ ಕೊಲ್ಲುವ ಮೂಲಕ ಏನು ಸಂದೇಶ ಕೊಡಲು ಹೊರಟಿದ್ದಾರೆ? ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಆಕ್ರೋಶ ಹೊರಹಾಕಿದ್ದಾರೆ. ಚಂದ್ರನಾಥ್ 2018 ರಿಂದ ಸುವೇಂದು ಅವರೊಂದಿಗೆ ಗುರುತಿಸಿಕೊಂಡಿದ್ದರು ಮತ್ತು ಈ ಹಿಂದೆ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದರು.
ಹಿಂಸಾಚಾರ ಖಂಡಿಸಿದ ಟಿಎಂಸಿ
We strongly condemn the brutal murder of Chandranath Rath in Madhyamgram tonight, along with the killing of three other TMC workers in incidents of post-poll violence allegedly carried out by BJP-backed miscreants over the last three days, despite the Model Code of Conduct being…
— All India Trinamool Congress (@AITCofficial) May 6, 2026
ತೃಣಮೂಲ ಕಾಂಗ್ರೆಸ್ ಕೂಡ ಈ ಹತ್ಯೆಯನ್ನು ಖಂಡಿಸಿದ್ದು, ಬಿಜೆಪಿ ಮೇಲೆಯೇ ಪ್ರತ್ಯಾರೋಪ ಮಾಡಿದೆ. ಮಧ್ಯಮಗ್ರಾಮದಲ್ಲಿ ಚಂದ್ರನಾಥ್ ರಥ್ ಹತ್ಯೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಆದರೆ ಕಳೆದ ಮೂರು ದಿನಗಳಲ್ಲಿ ಬಿಜೆಪಿ ಪ್ರೇರಿತ ದುಷ್ಕರ್ಮಿಗಳು ನಮ್ಮ ಮೂವರು ಕಾರ್ಯಕರ್ತರನ್ನು ಕೊಂದಿದ್ದಾರೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ನ್ಯಾಯಾಲಯದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಯಾಗಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಎಕ್ಸ್ ಸಂದೇಶದಲ್ಲಿ ಟಿಎಂಸಿ ಆಗ್ರಹಿಸಿದೆ.
ಇದನ್ನೂ ಓದಿ: ಪಶ್ಚಿಮ ಬಂಗಾಳ: ಬಿಜೆಪಿ-ಟಿಎಂಸಿ ಕಾರ್ಯಕರ್ತರ ಮಧ್ಯೆ ಭಾರೀ ಸಂಘರ್ಷ, ನಾಲ್ವರು ಸಾವು, ಉದ್ವಿಗ್ನ ಪರಿಸ್ಥಿತಿ
ಫಲಿತಾಂಶ ಪ್ರಕಟವಾದ ಮೇ 4 ರಿಂದ ಬಂಗಾಳದಲ್ಲಿ ಬೆದರಿಕೆ, ಹಲ್ಲೆ ಮತ್ತು ಕೊಲೆಗಳ ಸರಣಿ ಮುಂದುವರಿಯುತ್ತಿದೆ. ಡಿಜಿಪಿ ಸಿದ್ಧನಾಥ್ ಗುಪ್ತಾ ನೀಡಿರುವ ಮಾಹಿತಿಯಂತೆ, ಇದುವರೆಗೆ 200ಕ್ಕೂ ಹೆಚ್ಚು ಎಫ್‌ಐಆರ್ ದಾಖಲಾಗಿದ್ದು, 433 ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ 1,100ಕ್ಕೂ ಹೆಚ್ಚು ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ. ನ್ಯಾನೂರ್ ಮತ್ತು ನ್ಯೂ ಟೌನ್ ಭಾಗದಲ್ಲೂ ತಲಾ ಒಂದು ಸಾವು ವರದಿಯಾಗಿದೆ. ರಾಜ್ಯದಲ್ಲಿ ಶಾಂತಿ ಕಾಪಾಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
