ನವದೆಹಲಿ, ಜುಲೈ 29: ಲೋಕಸಭೆ ಅಧಿವೇಶನದಲ್ಲಿ ಇಂದು ಅಂಗೀಕರಿಸಿರುವ ಸಾರ್ವಜನಿಕ ಪರೀಕ್ಷೆ ಅಕ್ರಮ ತಡೆ ತಿದ್ದುಪಡಿ ಮಸೂದೆಯು ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನಗೊಳಿಸಲಿದೆ ಎಂದು ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭೆಯಲ್ಲಿ ಇಂದು ಮಂಡಿಸಿರುವ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026 (Public Examinations (Prevention of Unfair Means) Amendment Bill 2026) ಅನ್ನು ಸಂಸತ್ ಅಂಗೀಕರಿಸಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಯುವಲ್ಲಿ ಕಠಿಣ ಕಾನೂನು ಚೌಕಟ್ಟನ್ನು ತಂದಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ತ್ವರಿತ ನ್ಯಾಯಾಲಯಗಳ ಸ್ಥಾಪನೆ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದಿದ್ದಾರೆ.
ಪರೀಕ್ಷಾ ಅಕ್ರಮದ ವಿರುದ್ಧ ಕಠಿಣ ಕ್ರಮ:
ಪರೀಕ್ಷಾ ಅಕ್ರಮಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಹ ಮಹತ್ವದ ನಿಯಮಗಳನ್ನು ಒಳಗೊಂಡಿರುವ ಈ ಮಸೂದೆ ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಕಟಿಬದ್ಧವಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ದೇಶಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು ನ್ಯಾಯಸಮ್ಮತತೆಯನ್ನು ಮತ್ತಷ್ಟು ಬಲಪಡಿಸುವ ಗುರಿ ಹೊಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
“ಪರೀಕ್ಷಾ ಅಕ್ರಮಗಳನ್ನು ಮಟ್ಟಹಾಕಲು ಕಠಿಣ ಕಾನೂನು ಚೌಕಟ್ಟನ್ನು ತರುವ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕವನ್ನು ಲೋಕಸಭೆಯು ಅಂಗೀಕರಿಸಿದೆ. ಈ ವಿಧೇಯಕವು ಪರೀಕ್ಷಾ ಅಕ್ರಮದ ಜಾಲವನ್ನು ನಿರ್ಮೂಲನೆ ಮಾಡುವ ಮತ್ತು ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ವಿಶ್ವಸನೀಯತೆ ಹಾಗೂ ನ್ಯಾಯಸಮ್ಮತತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ” ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ವಂದೇ ಮಾತರಂ ಗೀತೆಗೆ ಅವಮಾನ ಮಾಡುವುದು ಕ್ರಿಮಿನಲ್ ಅಪರಾಧ; ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ
ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕದಲ್ಲೇನಿದೆ?:
ಕೇಂದ್ರ ಸರ್ಕಾರವು ದೇಶಾದ್ಯಂತ ನಡೆಯುವ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ಹಾಗೂ ಪರೀಕ್ಷಾ ಅಕ್ರಮ ಅಥವಾ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026 ಅನ್ನು ಸಂಸತ್ತಿನಲ್ಲಿ ಅಂಗೀಕರಿಸಿದೆ. ಈ ವಿಧೇಯಕದ ಮುಖ್ಯ ಉದ್ದೇಶಗಳೆಂದರೆ, ಪ್ರವೇಶ ಪರೀಕ್ಷೆಗಳು (NEET, CUET ಇತ್ಯಾದಿ) ಹಾಗೂ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದನ್ನು ತಡೆಯುವುದು. ಪರೀಕ್ಷಾ ಅಕ್ರಮ ನಡೆಸುವ ಸೈಬರ್ ಕ್ರೈಮ್ ಜಾಲ, ಕೋಚಿಂಗ್ ಸೆಂಟರ್‌ಗಳು ಮತ್ತು ಪ್ರಭಾವಿ ಸಿಂಡಿಕೇಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು. ಕಷ್ಟಪಟ್ಟು ಓದುವ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಮತ್ತು ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ