
ಬೆಂಗಳೂರು, ಮಾರ್ಚ್ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿದ್ದ ಇತರ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ, ಗ್ಯಾಸ್ ಸಿಲಿಂಡರ್‌ಗಳಿಂದ ಅನಿಲ ಸೋರಿಕೆ ಆಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ.
ಲಾರಿ ಪಲ್ಟಿಯಾದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ ಕುರಿತು ರಾಜಾಜಿನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಈ ಅಪಘಾತದ ದೃಶ್ಯಗಳು ದಾಖಲಾಗಿದ್ದು, ಫೂಟೇಜ್‌ಗಳನ್ನು ಪರಿಶೀಲಿಸಲಾಗುತ್ತಿದೆ.