ಆನೇಕಲ್, ಜು.23: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, 8ಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ವಾಸವಿದ್ದ ಕಟ್ಟಡದಲ್ಲಿ ಇಂದು ಮುಂಜಾನೆ ಸುಮಾರು 6 ಗಂಟೆಯ ವೇಳೆಗೆ ಈ ದುರಂತ ಸಂಭವಿಸಿದೆ. ಬುಧವಾರ ರಾತ್ರಿ ಕೊಠಡಿಯಲ್ಲಿದ್ದ ಸಿಲಿಂಡರ್‌ನ ಗ್ಯಾಸ್ ಲೀಕ್ ಆಗಿತ್ತು. ಇದನ್ನು ಗಮನಿಸದ ಕಾರ್ಮಿಕರು, ಬೆಳಿಗ್ಗೆ ಎದ್ದು ಕೊಠಡಿಯ ಲೈಟ್ ಆನ್ ಮಾಡುತ್ತಿದ್ದಂತೆ ಒಮ್ಮೆಗೆ ವಿದ್ಯುತ್ ಸಂಚಾರದಿಂದ ಗ್ಯಾಸ್ ಸ್ಪೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಕೊಠಡಿಗಳಲ್ಲಿ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಫೋಟದ ರಭಸಕ್ಕೆ ಕಟ್ಟಡದ ಬಾಗಿಲುಗಳು ಮತ್ತು ಕಿಟಕಿಗಳು ಪುಡಿಪುಡಿಯಾಗಿವೆ. ಈ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡ ಎಂಟಕ್ಕೂ ಹೆಚ್ಚು ಕಾರ್ಮಿಕರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ, ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ