ಮಂಗಳೂರು, (ಜುಲೈ 01): ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ (Dakshina Kannada) ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ನಾಳೆ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ (Red Alert) ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಾಳೆ (ಜುಲೈ 02) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ (PU) ಸೇರಿದಂತೆ ಎಲ್ಲ ಕಾಲೇಜುಗಳಿಗೆ ನಾಳೆ ರಜೆ ಇರಲಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಇನ್ನು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ ತೀರದಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ಹಾಗೂ ನದಿ ತೀರದ ಪ್ರದೇಶಗಳಲ್ಲಿ ಗಾಳಿಯ ವೇಗವೂ ಹೆಚ್ಚಿರಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.