ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆImage Credit source: tv9
ಬೆಳಗಾವಿ, ಮಾರ್ಚ್ 5: ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್ಮ್ಯಾನ್ಡ್ ಏರಿಯಲ್ ವಾಹನಗಳ (UAV) ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ರೆಡ್ ಝೋನ್ ಮತ್ತು ಯೆಲ್ಲೋ ಝೋನ್ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಮಾನ ನಿಲ್ದಾಣದ ಭದ್ರತೆ ದೃಷ್ಟಿಯಿಂದ ಈ ಕ್ರಮ ಅತ್ಯಾವಶ್ಯಕವಾಗಿದ್ದು, ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಇದನ್ನೂ ಓದಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್
ಪೊಲೀಸ್ ಆಯುಕ್ತರ ಪ್ರಕಟಣೆಯಲ್ಲೇನಿದೆ?
ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣವನ್ನು ಹಾಗೂ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ರೆಡ್ ಜೋನ್ (Red Zone) ಎಂದು ಘೋಷಿಸಿರುತ್ತಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) ಯಾವುದೇ ರೀತಿಯ ಪ್ರೋನ್ /ಅನ್ಮ್ಯಾನಡ್ ಏರಿಯಲ್ ವಾಹನ (UAV/Drone) ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 9:45 am, Thu, 5 March 26
