
ಯಾದಗಿರಿ, ಮಾರ್ಚ್ 11: ಜಿಲ್ಲೆಯ ಭೂಗರ್ಭದಲ್ಲಿ ಖನಿಜ ನಿಕ್ಷೇಪಗಳಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯ ಆರಂಭವಾಗಿದೆ. ಚಿನ್ನ ಸೇರಿದಂತೆ ವಿವಿಧ ಖನಿಜ ನಿಕ್ಷೇಪಗಳ ಪತ್ತೆಗಾಗಿ ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಇಂದಿನಿಂದ ಜಿಲ್ಲೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಈ ಸಮೀಕ್ಷೆಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಹೆಲಿಕಾಪ್ಟರ್ ಮೂಲಕ ಆಕಾಶದಿಂದಲೇ ಪರಿಶೀಲನೆ ನಡೆಸಲಾಗುತ್ತಿದೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಮತ್ತು ಎಲ್ಹೇರಿ ಭಾಗಗಳಲ್ಲಿ ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಯುತ್ತಿದೆ. ಆಕಾಶದಲ್ಲಿ ನಿರಂತರವಾಗಿ ಹೆಲಿಕಾಪ್ಟರ್ ಹಾರುತ್ತಿರುವುದನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಈ ಸಮೀಕ್ಷಾ ಕಾರ್ಯವನ್ನು ನಡೆಸಲು ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಜಿಲ್ಲಾಡಳಿತದಿಂದ ಅನುಮತಿ ಪಡೆದುಕೊಂಡಿದ್ದು, ಮಾರ್ಚ್ 31ರವರೆಗೆ ನಡೆಯಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.