ಸಂಸತ್ತಿನಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಮಂಡನೆ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾಗೆ 10 ವರ್ಷ ಜೈಲು, 10 ಕೋಟಿ ರೂ. ದಂಡ – Kannada News | Public Examinations Amendment Bill 2026: Centre Tables New Exam Reform Bill With Stricter Penalties for Question Paper Leak Syndicates

ನವದೆಹಲಿ,ಜುಲೈ 27: ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷಾ ಅಕ್ರಮ ಮತ್ತು ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆ( Question Paper Leak)ಮಾಫಿಯಾವನ್ನು ಮಟ್ಟಹಾಕಲು ಕೇಂದ್ರ ಸರ್ಕಾರ ಪ್ರಮುಖ ಕ್ರಮ ಕೈಗೊಂಡಿತು. ‘ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ ಅನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಮಂಡಿಸಿದರು.

ಮಸೂದೆಯ ಕುರಿತು ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, “ಇದು ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕ ದಿನವಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಕೇಂದ್ರ ಸರ್ಕಾರ ಅತ್ಯಂತ ಕಠಿಣ ಕಾನೂನನ್ನು ತಂದಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಗದ್ದಲ ಎಬ್ಬಿಸದೆ ಚರ್ಚೆಯಲ್ಲಿ ಭಾಗವಹಿಸಬೇಕು” ಎಂದು  ಮನವಿ ಮಾಡಿದ್ದರು.

ಮಸೂದೆಯ ಪ್ರಮುಖ ಕಠಿಣ ನಿಬಂಧನೆಗಳು
ಪರೀಕ್ಷೆಗಳಲ್ಲಿ ಅಕ್ರಮ ಎಸಗುವ ವ್ಯಕ್ತಿಗಳಿಗೆ 5 ರಿಂದ 10 ವರ್ಷಗಳ ಜೈಲು ಶಿಕ್ಷೆ ಹಾಗೂ ಸಂಘಟಿತ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 10 ಕೋಟಿ ರೂ.ವರೆಗೆ ದಂಡ ವಿಧಿಸಲು ತಿದ್ದುಪಡಿ ತರಲಾಯಿತು. ಪತ್ರಿಕೆ ಸೋರಿಕೆಯಲ್ಲಿ ಯಾವುದೇ ಕೋಚಿಂಗ್ ಸೆಂಟರ್‌ಗಳು ಅಥವಾ ತರಬೇತಿ ಸಂಸ್ಥೆಗಳು ಭಾಗಿಯಾಗಿರುವುದು ಸಾಬೀತಾದರೆ ಅವುಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಯಿತು.

ಮತ್ತಷ್ಟು ಓದಿ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು; ಜುಲೈ 27ರಂದು ಲೋಕಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

ಪರೀಕ್ಷೆ ನಡೆಸುವ ಕಂಪನಿಗಳು ತಪ್ಪಿತಸ್ಥರೆಂದು ಕಂಡುಬಂದರೆ ಅವುಗಳನ್ನು 8 ವರ್ಷಗಳ ಕಾಲ ಕಪ್ಪುಪಟ್ಟಿಗೆ ಸೇರಿಸಲಾಗುವುದು ಹಾಗೂ ಕಂಪನಿಯ ಹಿರಿಯ ಆಡಳಿತ ಮಂಡಳಿ ಮತ್ತು ನಿರ್ದೇಶಕರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲು ನಿರ್ಧರಿಸಲಾಯಿತು. ಪ್ರಕರಣಗಳ ತನಿಖೆಯನ್ನು 2 ತಿಂಗಳೊಳಗೆ ಪೂರ್ಣಗೊಳಿಸುವುದು ಹಾಗೂ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ದೈನಂದಿನ ವಿಚಾರಣೆ ನಡೆಸಿ, ಆರೋಪಪಟ್ಟಿ ಸಲ್ಲಿಕೆಯಾದ 3 ತಿಂಗಳೊಳಗೆ ತೀರ್ಪು ನೀಡುವುದನ್ನು ಕಡ್ಡಾಯಗೊಳಿಸಲಾಯಿತು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದ ಕುರಿತು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ವಿರೋಧ ಪಕ್ಷದ ಸಂಸದರು ಸೋಮವಾರ ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು.

ಮಸೂದೆ ಮಂಡನೆಯ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೊ ಸಂದೇಶದ ಮೂಲಕ ಪರೀಕ್ಷಾ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಮತ್ತು ಪಾರದರ್ಶಕತೆ ತರಲು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಆರು ಸದಸ್ಯರ ‘ಉನ್ನತಾಧಿಕಾರದ ಕಾರ್ಯಪಡೆ’ ರಚನೆಯನ್ನು ಪ್ರಕಟಿಸಿದರು.

ಇನ್ನೊಂದೆಡೆ, ಸಚಿವರ ರಾಜೀನಾಮೆ ಹಾಗೂ ಪ್ರತಿಭಟನೆಗಳ ನಂತರ ಸೃಷ್ಟಿಯಾದ ರಾಜಕೀಯ ವಾತಾವರಣದ ನಡುವೆ, ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರದ ಈ ಮಸೂದೆಯನ್ನು ಎದುರಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ‘ಇಂಡಿ’ ಒಕ್ಕೂಟದ ನಾಯಕರು ಪ್ರತ್ಯೇಕ ಸಭೆ ನಡೆಸಿ ತಮ್ಮ ಜಂಟಿ ಕಾರ್ಯತಂತ್ರವನ್ನು ರೂಪಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:07 pm, Mon, 27 July 26

Source link

Leave a Reply

Your email address will not be published. Required fields are marked *