200 ಕೋಟಿ ರೂಪಾಯಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಜಾರಿ ನಿರ್ದೇಶನಾಲಯ (ED) ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಜಾಕ್ವೆಲಿನ್ ಗುರುವಾರ ಹಿಂಪಡೆದಿದ್ದಾರೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಜಾಯ್‌ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಅರ್ಜಿ ಹಿಂಪಡೆಯಲು ನಟಿಗೆ ಅನುಮತಿ ನೀಡಿದೆ.
ಇಡಿ ದಾಖಲಿಸಿದ್ದ ದೋಷಾರೋಪ ಪಟ್ಟಿ ಹಾಗೂ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈಗ ಅರ್ಜಿ ಹಿಂಪಡೆದಿರುವುದರಿಂದ ಅವರ ವಿರುದ್ಧದ ಕಾನೂನು ಪ್ರಕ್ರಿಯೆಗಳು ಕೆಳಹಂತದ ವಿಚಾರಣಾ ನ್ಯಾಯಾಲಯದಲ್ಲಿ ಮುಂದುವರಿಯಲಿವೆ.
ಈ ಹಿಂದೆ ಜೂನ್ 11ರಂದು ಈ ಅರ್ಜಿಯು ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಅತುಲ್ ಎಸ್. ಚಂದೂರ್ಕರ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ, ನ್ಯಾಯಮೂರ್ತಿ ಮಿಶ್ರಾ ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ಕೇಸ್‌ನಲ್ಲಿ ತಮ್ಮ ಮಗ ಸರ್ಕಾರದ ಪರವಾಗಿ ಹಾಜರಾಗಿದ್ದರಿಂದ, ನೈತಿಕತೆಯ ಆಧಾರದ ಮೇಲೆ ತಾವು ವಿಚಾರಣೆ ನಡೆಸುವುದಿಲ್ಲ ಎಂದು ಅವರು ತಿಳಿಸಿದ್ದರು. ಆ ಬಳಿಕ ಪ್ರಕರಣವನ್ನು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಪೀಠಕ್ಕೆ ವರ್ಗಾಯಿಸಲಾಯಿತು.
ಇದೇ ತಿಂಗಳ ಆರಂಭದಲ್ಲಿ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರಾಗಿದ್ದ ಜಾಕ್ವೆಲಿನ್ ಫರ್ನಾಂಡಿಸ್, ಪಿಎಂಎಲ್‌ಎ (PMLA) ಅಡಿ ತಮ್ಮ ವಿರುದ್ಧ ಹೊರಿಸಲಾದ ಆರೋಪಗಳು ಸುಳ್ಳು ಮತ್ತು ತಾವು ನಿರಪರಾಧಿ ಎಂದು ಹೇಳಿದ್ದರು. ಅಲ್ಲದೆ, ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದರು. ಈ ಪ್ರಕರಣದಲ್ಲಿ ಮುಖ್ಯ ಆರೋಪಿ ಸುಕೇಶ್ ಚಂದ್ರಶೇಖರ್, ಆತನ ಪತ್ನಿ ಲೀನಾ ಮರಿಯಾ ಪಾಲ್ ಸೇರಿದಂತೆ 14 ಜನರ ವಿರುದ್ಧ ಆರೋಪ ನಿಗದಿಪಡಿಸಲಾಗಿದ್ದು, ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಲಾಗಿದೆ.
ಇದನ್ನೂ ಓದಿ: ಬಾಡಿಗಾರ್ಡ್ ವರ್ತನೆಗೆ ನೆಟ್ಟಿಗರ ಆಕ್ರೋಶ: ಜಾಕ್ವೆಲಿನ್ ಕೈ ಹಿಡಿದು ಎಳೆದ ಭದ್ರತಾ ಸಿಬ್ಬಂದಿ
ಕೆಲವು ವಾರಗಳ ಹಿಂದಷ್ಟೇ ಜಾಕ್ವೆಲಿನ್ ಈ ಪ್ರಕರಣದಲ್ಲಿ ತಾವು ಅಪ್ರೂವರ್ ಆಗಲು ಸಲ್ಲಿಸಿದ್ದ ಅರ್ಜಿಯನ್ನೂ ಹಿಂಪಡೆದಿದ್ದರು. ಇಡಿ ಅವರ ಮನವಿಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ತನಿಖೆಯ ಸಮಯದಲ್ಲಿ ಜಾಕ್ವೆಲಿನ್ ಅವರ ನಡವಳಿಕೆ ಸರಿಯಾಗಿರಲಿಲ್ಲ ಮತ್ತು ಅವರು ಪೂರ್ಣ ಸತ್ಯವನ್ನು ಮರೆಮಾಚಿದ್ದಾರೆ ಎಂದು ಇಡಿ ಆರೋಪಿಸಿದೆ. ಸುಕೇಶ್ ಚಂದ್ರಶೇಖರ್ ಅಪರಾಧ ಹಿನ್ನೆಲೆ ತಿಳಿದಿದ್ದರೂ ಜಾಕ್ವೆಲಿನ್ ಆತನೊಂದಿಗೆ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
