ಮೈಸೂರು, ಏಪ್ರಿಲ್ 24: ನಗರದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ಹೆಚ್ಚು ಪರಿಣಾಮಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಕೆ.ಆರ್ ಆಸ್ಪತ್ರೆಯಲ್ಲಿ 20 ಬೆಡ್‌ಗಳು ಹಾಗೂ ಚೆಲುವಾಂಬ ಆಸ್ಪತ್ರೆಯಲ್ಲಿ 15 ಬೆಡ್‌ಗಳನ್ನು ಬಿಸಿಲಿನ ಪರಿಣಾಮದಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ, ಮಕ್ಕಳ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್ ವ್ಯವಸ್ಥೆ ಮಾಡಲಾಗಿದ್ದು, ರೋಗಿಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಲಾಗಿದೆ. ಆರೋಗ್ಯ ಇಲಾಖೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಅಗತ್ಯ ಸಲಹೆಗಳನ್ನು ನೀಡುತ್ತಿದೆ.
