
ಮಂಡ್ಯ, ಮಾರ್ಚ್ 07: ಖೇಲೋ ಇಂಡಿಯಾ (Khelo India)ಯೋಜನೆಯಡಿ ಮಂಡ್ಯದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ (Mandya Sports Complex) ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದ ವಿಸಿ ಫಾರಂನಲ್ಲಿ ಮಾತನಾಡಿದ ಅವರು, ಸುಮಾರು 14 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
ಸಂಪೂರ್ಣ ಅಭಿವೃದ್ಧಿಗಾಗಿ 5 ಎಕರೆಗೆ ವಿಸ್ತರಣೆ
ವಿಸಿ ಫಾರಂನ ಸುಮಾರು 1.5 ಎಕರೆ ಜಾಗದಲ್ಲಿ ಪ್ರಥಮ ಹಂತದಲ್ಲಿ ಕಾಂಪ್ಲೆಕ್ಸ್ ನಿರ್ಮಿಸಲು ನಿರ್ಧರಿಸಲಾಗಿದ್ದು, ಮಾರ್ಚ್ 14ರಂದು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕ್ರೀಡೆಯಲ್ಲಿ ಹೆಚ್ಚಿನ ಅವಕಾಶಗಳು ದೊರೆಯಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೊಳ್ಳಲಾಗಿದೆ ಎಂದಿದ್ದಾರೆ. ಇದೇ ವೇಳೆ ಮುಂದಿನ ದಿನಗಳಲ್ಲಿ ಈ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಅನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಯೋಜನೆಯೂ ಇದೆ ಎಂದು ಹೇಳಿದರು. ಸಂಪೂರ್ಣ ಅಭಿವೃದ್ಧಿಗಾಗಿ ಸುಮಾರು 5 ಎಕರೆ ಜಾಗ ಅಗತ್ಯವಿದ್ದು, ಮುಂದಿನ ಹಂತದಲ್ಲಿ ಅದನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಸೂಕ್ತ ಜಾಗದ ಕೊರತೆ ಇರುವ ಕಾರಣ ವಿಸಿ ಫಾರಂ ಪ್ರದೇಶದಲ್ಲಿ ಈ ಯೋಜನೆಯನ್ನು ಆರಂಭಿಸಲಾಗುತ್ತಿದೆ. ಹೆಚ್ಚುವರಿ ಅಭಿವೃದ್ಧಿಗಾಗಿ ಮತ್ತಷ್ಟು ಜಾಗ ಒದಗಿಸಲಾಗುತ್ತದೆ ಎಂಬ ನಿರೀಕ್ಷೆ ಇದೆ. ಇದಕ್ಕಾಗಿ ಹಲವು ಬಾರಿ ಭೂಮಿ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಹೆಚ್ಡಿಕೆ ಹೇಳಿದ್ದಾರೆ. ಈ ಯೋಜನೆಗೆ ಯಾವುದೇ ರೀತಿಯ ರಾಜಕೀಯ ಸಂಬಂಧ ಇಲ್ಲ. ಗ್ರಾಮೀಣ ಮಕ್ಕಳಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ನೀಡುವುದು ಹಾಗೂ ಉತ್ತಮ ಸೌಲಭ್ಯಗಳನ್ನು ಒದಗಿಸುವುದೇ ಇದರ ಮುಖ್ಯ ಉದ್ದೇಶ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.