
ತುಮಕೂರು, ಮಾರ್ಚ್ 21: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಿನ್ನಲೆ ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಗಮನ ಹಿನ್ನಲೆಯಲ್ಲಿ ತುಮಕೂರಿನ ಕ್ಯಾತಸಂದ್ರ ಸಮೀಪದ ಸಿದ್ದಗಂಗಾ ಮಠದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಮಠದ ಪೀಠಾಧಿಪತಿ ಸಿದ್ದಲಿಂಗ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತುಮಕೂರು ಎಸ್ಪಿ ಅಶೋಕ್ ಹಾಗೂ ಶಾಸಕರುಗಳಾದ ಸುರೇಶ್ ಗೌಡ, ಜ್ಯೋತಿ ಗಣೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ರಾಷ್ಟ್ರಪತಿ ಭೇಟಿ ಹಿನ್ನಲೆಯಲ್ಲಿ ಅಗತ್ಯ ಬಂದೋಬಸ್ತ್ ಹಾಗೂ ಇತರೆ ಸಿದ್ಧತೆಗಳ ಕುರಿತು ಚರ್ಚೆ ಮಾಡಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವೇಳಾ ಪಟ್ಟಿ ಹೀಗಿದೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾರ್ಚ್ 31ರಂದು ಬೆಂಗಳೂರಿಗೆ ಆಗಮಿಸಲಿದ್ದು, ಲೋಕಪಾಲ್ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಅವರು, ಮಠದ ಪೂಜ್ಯ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ.
ಇದನ್ನೂ ಓದಿ: ಇಂದಿನಿಂದ ಸಿದ್ಧಗಂಗಾ ಮಠದಲ್ಲಿ ಜಾತ್ರಾ ಮಹೋತ್ಸವ: 15 ದಿನದ ಜಾತ್ರೆಯಲ್ಲಿ ಏನೆಲ್ಲಾ ವಿಶೇಷ ಗೊತ್ತಾ?
ಬಳಿಕ ಮಠದ ಸುಮಾರು 10 ಸಾವಿರ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದು, ಆ ಬಳಿಕ ಶಿವಕುಮಾರಸ್ವಾಮೀಜಿಗಳ 119ನೇ ಜನ್ಮದಿನಾಚರಣೆ ಅಂಗವಾಗಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಅಗತ್ಯ ಬಂದೋಬಸ್ತ್ ಹಾಗೂ ಇತರೆ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.