IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ (Vaibhav Suryavanshi) ಹಾಗೂ ಯಶಸ್ವಿ ಜೈಸ್ವಾಲ್ (Yashasvi Jaiswal) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಮಳೆಯ ಕಾರಣ 11 ಓವರ್ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ವಿಸ್ಫೋಟಕ ಆರಂಭ ಒದಗಿಸಿದ್ದರು.
ಈ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಯುವ ಜೋಡಿ ಮೂರು ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 58 ರನ್ಗಳು. ಇತ್ತ 18 ಎಸೆತಗಳಲ್ಲಿ 58 ರನ್ ಬಾರಿಸಿದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಾಖಲೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.
ಅಂದರೆ ಐಪಿಎಲ್ ಇತಿಹಾಸದಲ್ಲಿ ಮೊದಲ ಮೂರು ಓವರ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಆರ್ಸಿಬಿ ತಂಡದ ಹೆಸರಿನಲ್ಲಿದೆ. 2011 ರಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ರಿಸ್ ಗೇಲ್ ಹಾಗೂ ತಿಲಕರತ್ನೆ ದಿಲ್ಶಾನ್ ಕೇವಲ 3 ಓವರ್ಗಳಲ್ಲಿ 66 ರನ್ ಬಾರಿಸಿದ್ದರು. ಇದು ಐಪಿಎಲ್ ಇತಿಹಾಸದಲ್ಲಿ ಮೊದಲ 3 ಓವರ್ಗಳಲ್ಲಿ ಮೂಡಿಬಂದ ಗರಿಷ್ಠ ಸ್ಕೋರ್.
ಇತ್ತ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ 3 ಓವರ್ಗಳಲ್ಲಿ 58 ರನ್ ಗಳಿಸಲಷ್ಟೇ ಶಕ್ತರಾದರು. ಇದಾಗ್ಯೂ ಈ ಸ್ಫೋಟಕ ಆರಂಭದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಈ ಪಂದ್ಯದಲ್ಲಿ ನಿಗದಿತ 11 ಓವರ್ಗಳಲ್ಲಿ 150 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 11 ಓವರ್ಗಳಲ್ಲಿ 123 ರನ್ಗಳಿಸಿ 27 ರನ್ಗಳಿಂದ ಸೋಲೊಪ್ಪಿಕೊಂಡಿದೆ.




