IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಅವರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ.
ಏಪ್ರಿಲ್ 11, 2026 ರಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ನಿಗದಿತ ಸಮಯದೊಳಗೆ ಓವರ್ಗಳನ್ನು ಪೂರ್ಣಗೊಳಿಸಲು ಸಿಎಸ್ಕೆ ತಂಡ ವಿಫಲವಾಯಿತು. ಐಪಿಎಲ್ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವೆಂದು ಪರಿಗಣಿಸಲಾಗಿದೆ. ಹೀಗಾಗಿ ಸಿಎಸ್ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ. ಅಲ್ಲದೆ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ (ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ) ಎಲ್ಲಾ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕನಿಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.




