ಬೆಂಗಳೂರು/ದೆಹಲಿ, ಏಪ್ರಿಲ್ 29: ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ದೆಹಲಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಜಾರಿಗೆ ತರಲಾದ ‘ಒಳ ಮೀಸಲಾತಿ’ ಕುರಿತು ಅವರು ಆಯೋಗಕ್ಕೆ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೆ ಕಿಶೋರ್ ಮಕ್ವಾನ ಸಂತಸ ವ್ಯಕ್ತಪಡಿಸಿದ್ದಾರೆ. ಇತರೆ ರಾಜ್ಯಗಳೂ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.
ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್
ಆಯೋಗದ ಅಧ್ಯಕ್ಷರ ಭೇಟಿಯ ನಂತರ ಸಚಿವ ಮಹದೇವಪ್ಪ ಅವರು ಸಂಸದ ಸುನಿಲ್ ಬೋಸ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಡಿನ್ನರ್ ಮೀಟಿಂಗ್ನಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಸಲೀಂ ಅಹ್ಮದ್ ಹಾಗೂ ಮುಖಂಡ ಹಂಪನಗೌಡ ಬಾದರ್ಲಿ ಉಪಸ್ಥಿತರಿದ್ದರು. ರಾಜ್ಯದಲ್ಲಿ ಕೇಳಿಬರುತ್ತಿರುವ ಸಿಎಂ ಬದಲಾವಣೆ ಚರ್ಚೆ, ಸಚಿವ ಸಂಪುಟ ಪುನಾರಚನೆ ಮತ್ತು ಅಹಿಂದ ವರ್ಗದ ನಾಯಕರ ಸ್ಥಾನಮಾನಗಳ ಕುರಿತು ಇಲ್ಲಿ ಸುದೀರ್ಘ ಚರ್ಚೆ ನಡೆದಿದೆ ಎನ್ನಲಾಗಿದೆ. ಮುಂಬರುವ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಕುರಿತೂ ಈ ನಾಯಕರು ಸಮಾಲೋಚನೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ