ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿ
ಯಾದಗಿರಿ, ಮೇ 09: ಜಿಲ್ಲೆಯಲ್ಲಿ ಇನ್ಸ್ಪೆಕ್ಟರ್ ಒಬ್ಬರು ಬರೋಬ್ಬರಿ ಒಂದು ಲಕ್ಷ ರೂ. ಲಂಚ (Bribe) ಪಡೆಯುವಾಗ ರೆಡ್ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿ ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.
ಮುಖ್ಯಾಂಶಗಳು
- ಆರೋಪಿಯನ್ನು ಬಂಧಿಸದಿರಲು ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದ ಇನ್ಸ್ಪೆಕ್ಟರ್
- ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿ ಅವರು ಹಣ ಪಡೆಯುವಾಗ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ.
- ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ಇನಾಂದಾರ್ ನೇತೃತ್ವದಲ್ಲಿ ದಾಳಿ
ನಡೆದಿದ್ದೇನು?
ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣವೊಂದು ದಾಖಲಾಗಿತ್ತು. ಈ ಕೇಸ್ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಅವರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಈ ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಟ್ಟು ಒಂದು ಲಕ್ಷ ರೂಪಾಯಿ ಹಣವನ್ನು ಪಡೆಯುವ ಒಪ್ಪಂದವಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ 1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ
ಗುರುಮಠಕಲ್ನ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ಒಂದು ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ. ಲಂಚದ ಹಣದೊಂದಿಗೆ ಇನ್ಸ್ಪೆಕ್ಟರ್ ವೀರಣ್ಣ ಬಲೆಗೆ ಬೀಳಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ಇನಾಂದಾರ್ ಅವರ ನೇತೃತ್ವದ ತಂಡ ಈ ದಾಳಿಯನ್ನು ನಡೆಸಿದೆ. ಸದ್ಯ ಆರೋಪಿ ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿಯನ್ನು ವಶಕ್ಕೆ ಪಡೆಯಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.