
ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ನಡೆಯಲಿದೆ. ಈ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕೆಪಿಸಿಸಿ ಕಚೇರಿಯಿಂದ ಎಲ್ಲಾ ಶಾಸಕರಿಗೂ ಬೆಂಗಳೂರಿನಲ್ಲೇ ಇರುವಂತೆ ಸೂಚನೆ ನೀಡಲಾಗಿದೆ. ಬಹುತೇಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಸಿಎಲ್ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಈ ವೇಳೆ ಹೈಕಮಾಂಡ್ ನಾಯಕರಿಂದ ಮುಂದಿನ ಮುಖ್ಯಮಂತ್ರಿಯನ್ನು ಘೋಷಿಸಲಾಗುತ್ತದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಂತೆ ಚುನಾವಣೆ ನಡೆಯದೆ, ಹೈಕಮಾಂಡ್ನ ನೇರ ನಿರ್ಧಾರವನ್ನು ಸಭೆಯಲ್ಲಿ ಪ್ರಕಟಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ಸಿಎಲ್ಪಿ ನಾಯಕನ ಆಯ್ಕೆಯಾದ ಬಳಿಕ ಮುಂದಿನ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭದ ದಿನಾಂಕವನ್ನೂ ನಿಗದಿಪಡಿಸುವ ಸಾಧ್ಯತೆ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ