Headlines

ಮಹಾರಾಷ್ಟ್ರದ ದೇವಸ್ಥಾನದಲ್ಲಿ ಛಾವಣಿ ಕುಸಿತ; 6 ಜನ ಸಾವು, ಅವಶೇಷಗಳಡಿ ಸಿಲುಕಿದ ಭಕ್ತರು – Kannada News | 6 dead after roof collapse at Hanuman Temple in Maharashtra 40 Devotees trapped

ಮುಂಬೈ, ಜೂನ್ 20: ಮಹಾರಾಷ್ಟ್ರದ (Maharashtra) ಪರ್ಭಾನಿ ಜಿಲ್ಲೆಯ ದೇವಸ್ಥಾನವೊಂದರಲ್ಲಿ ನಿರ್ಮಾಣ ಹಂತದಲ್ಲಿದ್ದ ಸಭಾ ಮಂಟಪದ ಛಾವಣಿ ಕುಸಿದು ಬಿದ್ದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಭಕ್ತರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ರಕ್ಷಣಾ ತಂಡಗಳು ಅವಶೇಷಗಳನ್ನು ತೆರವುಗೊಳಿಸಲು ಮತ್ತು ಬದುಕುಳಿದವರನ್ನು ಪತ್ತೆಹಚ್ಚಲು ಪ್ರಯತ್ನಗಳನ್ನು ಮುಂದುವರಿಸಿವೆ.

ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ. ಮಾರುತಿ ದೇವಸ್ಥಾನದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಭಾ ಮಂಟಪದ ಛಾವಣಿ ಕುಸಿದು ಬಿದ್ದಿದೆ. ಇದರ ಪರಿಣಾಮವಾಗಿ ಹಲವಾರು ಭಕ್ತರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಆರು ಜನರು ಸಾವನ್ನಪ್ಪಿದ್ದಾರೆ. 30ರಿಂದ 40 ಭಕ್ತರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಶನಿವಾರವಾದ್ದರಿಂದ ದೇವಸ್ಥಾನದ ಆವರಣದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದಾಗ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ: ದೆಹಲಿಯಲ್ಲೊಂದು ಬೇಬಿ ಬಜಾರ್! 8 ಲಕ್ಷಕ್ಕೆ ಗಂಡು ಮಗು, 4 ಲಕ್ಷಕ್ಕೆ ಹೆಣ್ಣು ಮಗು ಮಾರಾಟ

ಸಾವು ಅಥವಾ ಗಾಯಾಳುಗಳ ಸಂಖ್ಯೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಇನ್ನೂ ಯಾವುದೇ ಅಧಿಕೃತ ದೃಢೀಕರಣವನ್ನು ಬಿಡುಗಡೆ ಮಾಡಿಲ್ಲ. ಆದರೆ ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಟ್ಟಡ ಕುಸಿದ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಡಳಿತದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಸ್ಪಂದನಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ದುರಂತದಿಂದ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯ ಹಂಚಿಕೊಂಡಿರುವ ಸಂದೇಶದಲ್ಲಿ, ಈ ಅಪಘಾತದಲ್ಲಿ ಜೀವಹಾನಿಯಾಗಿರುವುದು ತೀವ್ರ ಆಘಾತ ತಂದಿದೆ ಎಂದು ಅವರು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಅವರು ತಮ್ಮ ಸಾಂತ್ವನವನ್ನು ತಿಳಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರ ಜಾಲ ಪತ್ತೆ; 7 ಮಂದಿ ಬಂಧನ

ಛಾವಣಿ ಕುಸಿತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆಗಳು ಪೂರ್ಣಗೊಂಡು ಪ್ರದೇಶವನ್ನು ಸುರಕ್ಷಿತಗೊಳಿಸಿದ ನಂತರ ಅಧಿಕಾರಿಗಳು ವಿವರವಾದ ತನಿಖೆಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ತುರ್ತು ಸೇವಾ ತಂಡಗಳು ತಮ್ಮ ಹುಡುಕಾಟವನ್ನು ಮುಂದುವರಿಸುತ್ತಿದ್ದಂತೆ, ದೇವಸ್ಥಾನದಲ್ಲಿ ಜಮಾಯಿಸಿದ ಭಕ್ತರ ಕುಟುಂಬಗಳು ಕುಸಿದ ಕಟ್ಟಡದ ಅಡಿಯಲ್ಲಿ ಸಿಲುಕಿರುವ ತಮ್ಮ ಸಂಬಂಧಿಕರ ಕುರಿತ ಮಾಹಿತಿಗಾಗಿ ಆತಂಕದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *