ಬೆಂಗಳೂರು, ಜುಲೈ 06: ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ (Monsoon rain) ಜೋರಾಗಿದೆ. ಭಾರೀ ಮಳೆಯಿಂದ ಈಗಾಗಲೇ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಇಂದೂ ಸಹ ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಭಾಗಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಸಾರ್ವಜನಿಕರು ಎಚ್ಚರಿಗೆವಹಿಸುವಂತೆ ಹೇಳಲಾಗಿದೆ.
ಕರಾವಳಿಗೆ ಆರೆಂಜ್ ಅಲರ್ಟ್
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ಇರಲಿದೆ. ಇನ್ನು ಬಾಗಲಕೋಟೆ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲೂ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.
ಹಾಸನ, ಕೊಡಗಿಗೂ ಅಲರ್ಟ್!
ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದ್ದು, **ಆರೆಂಜ್ ಅಲರ್ಟ್** ಪ್ರಕಟಿಸಲಾಗಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಸುಸ್ಥಿರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ