Headlines

Karnataka Weather Forecast: ಕರಾವಳಿಯಲ್ಲಿ ಭಾರೀ ಮಳೆ, 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬಿರುಗಾಳಿಯ ಭೀತಿ! – Kannada News | Karnataka Weather Update: Heavy Rain and Strong Winds Warned Across State

ಕರಾವಳಿಯಲ್ಲಿ ಭಾರೀ ಮಳೆ, 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬಿರುಗಾಳಿಯ ಭೀತಿ!

ಬೆಂಗಳೂರು, ಜುಲೈ 19: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಮಳೆ (Monsoon Rain) ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಕರಾವಳಿ ಭಾಗದಲ್ಲಿ ಮುಂದುವರಿದ ಅಬ್ಬರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಹಾಗೂ ನದಿ ತೀರದ ನಿವಾಸಿಗಳು ಜಾಗರೂಕರಾಗಿರಲು ಕೋರಲಾಗಿದೆ.

ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ಭೀತಿ

ಬೆಳಗಾವಿ, ಧಾರವಾಡ, ಗದಗ್, ಬೀದರ್, ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಸುಂಟರಗಾಳಿ ಮಾದರಿಯ ಬಲವಾದ ಗಾಳಿ ಬೀಸಲಿದೆ. ಇದರೊಂದಿಗೆ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಸಹ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಹೆಚ್ಚಾಗಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆ-ಗಾಳಿಯ ಆರ್ಭಟ

ಸಿಟಿ ಹಾಗೂ ಗ್ರಾಮಾಂತರ ಪ್ರದೇಶಗಳು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹವಾಮಾನ ಬದಲಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇಲ್ಲಿಯೂ ಸಹ ಗಾಳಿಯ ತೀವ್ರತೆ ಹೆಚ್ಚಿರಲಿದ್ದು, 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.

ಇನ್ನುಳಿದಂತೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರಮುಖವಾಗಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಗಾಳಿ ಬೀಸಲಿದ್ದು, ಒಟ್ಟಾರೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ತಂಪಾದ ಗಾಳಿ ಮುಂದುವರಿಯಲಿದೆ. ಬಲವಾದ ಗಾಳಿಯಿಂದಾಗಿ ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸಲಹೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *