ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಡಿಕೆಶಿ, ಕೆಪಿಸಿಸಿ ಅಧ್ಯಕ್ಷ ಕೆಪಿ ಹರಿಪ್ರಸಾದ್Image Credit source: tv9
ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಚರ್ಚೆ ಮತ್ತೆ ಜೋರಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ದೆಹಲಿಗೆ ತೆರಳಲಿದ್ದು, ಸಂಜೆ ರಾಜ್ಯದ ಸಂಸದರೊಂದಿಗೆ ಆಡಳಿತಾತ್ಮಕ ವಿಚಾರವಾಗಿ ಮಹತ್ವದ ಸಭೆ ನಡೆಸಲಿದ್ದಾರೆ. ಬಳಿಕ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಅಂತಿಮ ಹಂತದ ಚರ್ಚೆ ನಡೆಸುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ಇಂದು ದೆಹಲಿಗೆ ತೆರಳಲಿದ್ದಾರೆ.
ಹೈಕಮಾಂಡ್ ಒಪ್ಪಿಗೆ ನೀಡಿದರೆ ಇದೇ ವಾರ, ಜುಲೈ 29 ಅಥವಾ 30ರಂದು ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳ ನೇಮಕದ ಕುರಿತ ಚರ್ಚೆಯೂ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.
ಖರ್ಗೆ ಭೇಟಿಗೆ ಸಚಿವಾಕಾಂಕ್ಷಿಗಳ ದಂಡು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳುವ ಮುನ್ನವೇ ಬೆಂಗಳೂರಿನ ಅವರ ನಿವಾಸಕ್ಕೆ ಸಚಿವ ಸ್ಥಾನಾಕಾಂಕ್ಷಿ ಶಾಸಕರು ಭೇಟಿ ನೀಡಿ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಹಂಪನಗೌಡ ಬಾದರ್ಲಿ, ದದ್ದಲ್, ಅಜಯ್ ಸಿಂಗ್, ರಹೀಂ ಖಾನ್ ಸೇರಿದಂತೆ ಹತ್ತಕ್ಕೂ ಹೆಚ್ಚು ಶಾಸಕರು ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.
ಇದೇ ವೇಳೆ ಬಿ. ನಾಗೇಂದ್ರ, ವಿಜಯಾನಂದ ಕಾಶಪ್ಪನವರ್ ಹಾಗೂ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಕೆಲ ನಾಯಕರು ಪ್ರತ್ಯೇಕವಾಗಿ ದೆಹಲಿಗೆ ತೆರಳಿ ತಮ್ಮ ಪರ ಲಾಬಿ ನಡೆಸುತ್ತಿದ್ದಾರೆ.
ಸಚಿವ ಸ್ಥಾನಕ್ಕಾಗಿ ನಾಯಕರ ನಿರೀಕ್ಷೆ
ಚಿತ್ರದುರ್ಗ ಶಾಸಕ ಶಿವಗಂಗಾ ಬಸವರಾಜ ಅವರು ಸಚಿವ ಸ್ಥಾನ ಕುರಿತು ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದು, ಪಕ್ಷದ ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‘ನಾನು ಪಕ್ಷದಲ್ಲಿ ಶಿವನ ಮುಂದಿನ ಬಸವ ಇದ್ದಂತೆ. ಡಿಕೆಶಿ ಸಾಹೇಬರನ್ನ ಗಣಪತಿಯಂತೆ ಸುತ್ತುವರಿಯುತ್ತೇನೆ, ಮಂತ್ರಿಗಿರಿ ಕೊಟ್ಟರೆ ಗುಡ್, ಕೊಡದಿದ್ದರೆ ವೆರಿ ಗುಡ್’ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮತ್ತೊಂದೆಡೆ ಸಚಿವ ಎಂ.ಬಿ. ಪಾಟೀಲ್ ವಿಜಯಪುರ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ತಮಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂಬ ಸುದ್ದಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಇಂದು ರಾಜ್ಯ ಸಂಸದರ ಜತೆ ಡಿಕೆಶಿ ಸಭೆ
ಸಂಸತ್ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 6.30ಕ್ಕೆ ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ಬಾಕಿ ಉಳಿದಿರುವ ಯೋಜನೆಗಳ ಕುರಿತು ಚರ್ಚಿಸಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸಂಸದರಿಗೆ ಆಹ್ವಾನ ನೀಡಲಾಗಿದೆ.
ಇದನ್ನೂ ಓದಿ: ಚುನಾವಣಾ ರಾಜಕೀಯಕ್ಕೆ ಸಿದ್ದರಾಮಯ್ಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಆಪ್ತರು ಮತ್ತು ಅಭಿಮಾನಿಗಳಲ್ಲಿ ಆತಂಕ
ಸಂಪುಟ ವಿಸ್ತರಣೆ ಕುರಿತ ಚರ್ಚೆ, ಸಚಿವಾಕಾಂಕ್ಷಿಗಳ ಲಾಬಿ ಹಾಗೂ ದೆಹಲಿಯಲ್ಲಿ ನಡೆಯಲಿರುವ ಸರಣಿ ಸಭೆಗಳ ನಡುವೆಯೇ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಯಾವುದು ಎಂಬುದರ ಮೇಲೆ ರಾಜಕೀಯ ವಲಯದ ಚಿತ್ತ ನೆಟ್ಟಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ