ಬೆಂಗಳೂರು, (ಜುಲೈ 27): ನೀಟ್ ಪ್ರತಿಭಟನೆ (NEET Protest) ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ (CT Ravi) ವಿರುದ್ಧ ದಾಖಲಾಗಿರುವ ಎಫ್ಐಆರ್ ಪ್ರಕರಣ ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಇನ್ನೊಂದಡೆ ಎಫ್ಐಆರ್ ಪ್ರಶ್ನಿಸಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court), ಜುಲೈ 31ಕ್ಕೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ.
ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಸಂಖ್ಯೆ 149ಕ್ಕೆ ತಡೆ ನೀಡುವಂತೆ ಕೋರಿ ಸಿಟಿ ರವಿ ಪರ ವಕೀಲರು ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಿದ್ದಾರೆ. 3ನೇ ವ್ಯಕ್ತಿ ಈ ಕೇಸ್ ನಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಸಿಟಿ ರವಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ಇನ್ನು ನೋಟಿಸ್ ತಲುಪಿಲು ಹೋದ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ. ಕಾಂಗರೂ ಕೋರ್ಟ್ ನಂತೆ ವರ್ತಿಸಿದ್ದಾರೆಂದು ಎಸ್ ಪಿಪಿ ಬಿ.ಎನ್. ಜಗದೀಶ್ ಎಂದು ಪ್ರತಿವಾದ ಮಂಡಿಸಿದರು. ಈ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿದೆ. ಅಲ್ಲದೇ ಅಲ್ಲಿಯವರೆಗೂ ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಪೊಲೀಸರಿಗೆ ಸೂಚಿಸಿದೆ.
ಇದನ್ನೂ ಓದಿ: ಮುಲ್ಲಾಗಳಿಗೆ ಎದೆ ಸೀಳಿದ್ರೆ 3 ಅಕ್ಷರ ಬರಲ್ಲ ಹೇಳಿಕೆ ಕೇಸ್: ಸಿಟಿ ರವಿ ನಿವಾಸಕ್ಕೆ ನೋಟಿಸ್ ಅಂಟಿಸಿದ ಪೊಲೀಸ್
ಸಿಟಿ ರವಿ ಹೇಳಿದ್ದೇನು?
ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ನಡೆದ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ್ದ ಸಿಟಿ ರವಿ, ‘ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಅವರು ಬಂದು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದರೆ ಅದರ ಅರ್ಥವೇನು? ಎಂದಿದ್ದು, ಇದು ಮುಸ್ಲಿಂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಜಾಮಿಯಾ ಮಸೀದಿ ಸಮಿತಿಯ ಅರ್ಧಯಕ್ಷರ ದೂರಿನ ಮೇರೆಗೆ ಕ್ರಮ
ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಸಿ.ಟಿ. ರವಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಈಗಾಗಲೇ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದಾರೆ. ಬಳಿಕ ಸಿ.ಟಿ. ರವಿ ಅವರ ನಿವಾಸಕ್ಕೂ ತನಿಖಾಧಿಕಾರಿ ಹಾಗೂ ನಗರ ಠಾಣೆ ಇನ್ಸ್ಪೆಕ್ಟರ್ ಅಭಯ್ ಪ್ರಕಾಶ್ ನೋಟಿಸ್ ಅಂಟಿಸಿದ್ದರು.
ಇದೀಗ ಈ ಎಫ್ಐಆರ್ ಪ್ರಕರಣವು ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.