ಕಲಬುರಗಿ, ಜುಲೈ 30: ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (Morarji Desai School) ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಬೆಳಗಿನ ಉಪಹಾರ ಸೇವಿಸಿದ ಬೆನ್ನಲ್ಲೇ ಮಕ್ಕಳಿಗೆ ತೀವ್ರ ಹೊಟ್ಟೆನೋವು, ತಲೆಸುಸ್ತು ಹಾಗೂ ವಾಂತಿ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಬಹುತೇಕ ಮಕ್ಕಳ ಆರೋಗ್ಯ ಸ್ಥಿರವಾಗಿದೆ.
ನಡೆದಿದ್ದೇನು?
ಶಾಲೆಯಲ್ಲಿ ಎಂದಿನಂತೆ ಬೆಳಗಿನ ತಿಂಡಿಗೆ ಅವಲಕ್ಕಿ ಮಾಡಲಾಗಿತ್ತು. ಆದರೆ, ಉಪಹಾರ ಸೇವಿಸುವಾಗಲೇ ಅದರಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿಗಳು, ಬೇರೆ ತಿಂಡಿ ಮಾಡಿಕೊಡುವಂತೆ ಅಡುಗೆ ಸಿಬ್ಬಂದಿಗೆ ಮನವಿ ಮಾಡಿದ್ದಾರೆ. ಆದರೆ ಸಿಬ್ಬಂದಿ ಬೇರೆ ಉಪಹಾರ ಮಾಡಲು ನಿರಾಕರಿಸಿದ ಕಾರಣ, ಅನಿವಾರ್ಯವಾಗಿ ಮಕ್ಕಳು ಅದೇ ಅವಲಕ್ಕಿಯನ್ನು ಸೇವಿಸಿದ್ದಾರೆ. ತಿಂಡಿ ತಿಂದು ತರಗತಿಗೆ ತೆರಳುತ್ತಿದ್ದಂತೆ ಏಕಾಏಕಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ: ಪ್ರತಿಭಟನೆ
ಅಸ್ವಸ್ಥಗೊಂಡ ಎಲ್ಲಾ ಮಕ್ಕಳನ್ನು ತಕ್ಷಣವೇ ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಇತ್ತ ಸಿಬ್ಬಂದಿಯ ಬೇಜವಾಬ್ದಾರಿಯನ್ನು ಖಂಡಿಸಿ ವಸತಿ ಶಾಲೆಯ ಇತರ ವಿದ್ಯಾರ್ಥಿಗಳು ಅಫಜಲಪುರ ಸರ್ಕಾರಿ ಆಸ್ಪತ್ರೆ ಮುಂಭಾಗ ರಸ್ತೆ ತಡೆದು ಪ್ರತಿಭಟಿಸಿದರು. ಇದರಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಶಾಸಕ ಎಂ.ವೈ. ಪಾಟೀಲ್ ಆಸ್ಪತ್ರೆಗೆ ಭೇಟಿ: ಅಧಿಕಾರಿಗಳ ಅಮಾನತಿಗೆ ಸೂಚನೆ
ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಂ.ವೈ. ಪಾಟೀಲ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ, ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಿದ ಶಾಲೆಯ ವಾರ್ಡನ್, ಮುಖ್ಯ ಶಿಕ್ಷಕ ಹಾಗೂ ಅಡುಗೆ ಸಹಾಯಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಶಾಲೆ ಆರಂಭವಾಗಿ ಎರಡು ತಿಂಗಳಾದ್ರೂ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಬರಿಗಾಲಲ್ಲೇ ಶಾಲೆಗೆ ಬರುತ್ತಿರುವ ಮಕ್ಕಳು
ಕಲಬುರಗಿ ಜಿಲ್ಲೆಯ ವಸತಿ ಶಾಲೆಗಳಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಬೇಜವಾಬ್ದಾರಿಯುತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪಲಾವ್ ತಿಂದು 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಇನ್ನು ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿರುವ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಹುಳ ಬಿದ್ದಿದ್ದ ಪಲಾವ್ ಸೇವನೆ ಹಿನ್ನೆಲೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ತಕ್ಷಣ ಅಸ್ವಸ್ಥಗೊಂಡಿದ್ದ ಮಕ್ಕಳನ್ನು ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಮತ್ತೊಂದು ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ: ಭಾನುವಾರ ಹಿನ್ನೆಲೆ ತಪ್ಪಿದ ಅನಾಹುತ
ಪಲಾವ್ ತಿಂದ ಕೆಲವೇ ಹೊತ್ತಿನಲ್ಲಿ ಮಕ್ಕಳಿಗೆ ವಾಂತಿ-ಭೇದಿ, ತಲೆನೋವು ಹಾಗೂ ತಲೆಸುತ್ತು ಕಾಣಿಸಿಕೊಂಡು ಒದ್ದಾಡಲು ಪ್ರಾರಂಭಿಸಿದ್ದು, ಆಹಾರವನ್ನು ಪರಿಶೀಲಿಸಿದಾಗ ಅದರಲ್ಲಿ ಹುಳಗಳು ಪತ್ತೆಯಾಗಿವೆ. ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಿದ ವಸತಿ ನಿಲಯದ ವಾರ್ಡನ್ ಅಮರಗುಂಡಪ್ಪ ವಿರುದ್ಧ ಪೋಷಕರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.