ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನು ಸಹ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 16ನೇ ಓವರ್ನಲ್ಲೇ ಅಂದರೆ ಕೇವಲ 92 ಎಸೆತಗಳಲ್ಲಿ 209 ರನ್ ಕಲೆಹಾಕಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಇಷ್ಟು ಬೃಹತ್ ಮೊತ್ತವನ್ನು ಬೆನ್ನಟ್ಟಿದ ದಾಖಲೆಯನ್ನು ನಿರ್ಮಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಉತ್ತಮ ಆರಂಭವನ್ನು ಪಡೆಯಿತು. ಡೆವೊನ್ ಕಾನ್ವೇ ಮತ್ತು ಟಿಮ್ ಸೀಫರ್ಟ್ ಪವರ್ಪ್ಲೇನಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿದರು. ನಂತರ ರಚಿನ್ ರವೀಂದ್ರ 26 ಎಸೆತಗಳಲ್ಲಿ 44 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ನಾಯಕ ಮಿಚೆಲ್ ಸ್ಯಾಂಟ್ನರ್ ಕೂಡ 27 ಎಸೆತಗಳಲ್ಲಿ ಅಜೇಯ 47 ರನ್ ಗಳಿಸಿದರು. ಗ್ಲೆನ್ ಫಿಲಿಪ್ಸ್ 19 ರನ್ ಮತ್ತು ಡ್ಯಾರಿಲ್ ಮಿಚೆಲ್ 18 ರನ್ಗಳ ಕಾಣಿಕೆ ನೀಡಿದರು. ಪರಿಣಾಮವಾಗಿ, ನ್ಯೂಜಿಲೆಂಡ್ 20 ಓವರ್ಗಳಲ್ಲಿ 6 ವಿಕೆಟ್ಗಳ ನಷ್ಟಕ್ಕೆ 208 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.
ಮತ್ತೊಂದೆಡೆ, ಭಾರತದ ಪರ ಬೌಲಿಂಗ್ನಲ್ಲಿ ಮಿಂಚಿದ ಕುಲ್ದೀಪ್ ಯಾದವ್ ಎರಡು ವಿಕೆಟ್ಗಳನ್ನು ಪಡೆದರೆ, ಹರ್ಷಿತ್ ರಾಣಾ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು. ಆದಾಗ್ಯೂ, ಅರ್ಷದೀಪ್ ಸಿಂಗ್ ತಮ್ಮ ನಾಲ್ಕು ಓವರ್ಗಳಲ್ಲಿ 53 ರನ್ಗಳನ್ನು ಬಿಟ್ಟುಕೊಟ್ಟು ವಿಕೆಟ್ ಪಡೆಯದೆ ದುಬಾರಿ ಎನಿಸಿಕೊಂಡರು.
Published On – 10:32 pm, Fri, 23 January 26