
ಚೆಪಾಕ್ನ ಎಂಎ ಚಿದಂಬರಂ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೊಸ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಐಪಿಎಲ್ನಲ್ಲಿ ಮೊದಲ ಬಾರಿಗೆ ಸಿಎಸ್ಕೆ ತಂಡದ ಪರ ಆಡುತ್ತಿರುವ ಸಂಜುಗೆ ಮೊದಲ ಮೂರು ಪಂದ್ಯಗಳು ಉತ್ತಮವಾಗಿ ನಡೆದಿರಲಿಲ್ಲ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಸಂಜು ಮೊದಲಿಗೆ ಸಿಎಸ್ಕೆ ಪರ ಮೊದಲ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಆ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು. ಇದು ಸಂಜು ಅವರ ಐಪಿಎಲ್ ವೃತ್ತಿಜೀವನದಲ್ಲಿ ನಾಲ್ಕನೇ ಶತಕವಾಗಿದ್ದರೆ, ಸಿಎಸ್ಕೆ ಪರ ಮೊದಲ ಶತಕವಾಗಿದೆ.