ಬೆಂಗಳೂರು, (ಏಪ್ರಿಲ್ 24): ಕರ್ನಾಟಕ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್(D Sudhakar) ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು (Lung Infection) ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಚಿನ್ನದುರೈ ಎಂ ಡಿ ಅವರು ಪ್ರಕಟಣೆ ಹೊರಡಿಸಿದ್ದು, ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ತೊಂದರೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸಚಿವರ ಅರೋಗ್ಯದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡುತ್ತಿವೆ. ಇದು ಅವರ ಅಭಿಮಾನಿಗಳಲ್ಲಿ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ.
ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು?
ಕಿಮ್ಸ್ ಆಸ್ಪತ್ರೆಯ ಶ್ವಾಸಕೋಶ ಕಸಿ ವೈದ್ಯ ಹೇಳಿದ್ದೇನು?
ಇನ್ನು ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ಕಿಮ್ಸ್ ಆಸ್ಪತ್ರೆ ಶ್ವಾಸಕೋಶ ಕಸಿ ವೈದ್ಯ ಮಂಜುನಾಥ್ ಪ್ರತಿಕ್ರಿಯಿಸಿದ್ದು, ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಸಚಿವ ಡಿ ಸುಧಾಕರ್ಗೆ ಚಿಕಿತ್ಸೆ ನೀಡಲಾಗುತ್ತಿದೆ.ತಜ್ಞ ವೈದ್ಯಕೀಯ ತಂಡದಿಂದ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ವೆಂಟಿಲೇಟರ್ ಮತ್ತು ಎಕ್ಮೋ ನೆರವಿನಿಂದ ಉಸಿರಾಟವಾಡುತ್ತಿದ್ದಾರೆ. ಇನ್ಫೆಕ್ಷನ್ ಆಗಿರುವ ಶ್ವಾಸಕೋಶ ಸರಿಪಡಿಸಲು ಪ್ರಯತ್ನ ಪ್ರಯತ್ನ ನಡೆದಿದೆ. ಸಾಧ್ಯವಾಗದಿದ್ದಾಗ ಶ್ವಾಸಕೋಶ ಕಸಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್
ಇನ್ನು ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿಬರುತ್ತಿರುವುದರಿಂದ ಕಿಮ್ಸ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಚಿನ್ನದೊರೈ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸುಧಾಕರ್ ಅವರಿಗೆ ಕಿಮ್ಸ್ ನ ICU ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸಚಿವ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವ ಅವರು ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಚಿನ್ನದೊರೈ ಹೆಲ್ತ್ ಬುಲೆಟಿನ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಆಪರೇಷನ್ ಬಳಿಕ ಶ್ವಾಸಕೋಶ ಸೋಂಕು
ಮೊದಲು ಮೊಣಕಾಲು ಸಂಬಂಧ ಆಪರೇಷನ್ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿದ್ದು, ಇದು ಇದ್ದಕ್ಕಿದ್ದಂತೆ ಉಲ್ಬಣವಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಕಳೆದ ಮೂರು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
