IND vs NZ: ವೇಗದ ರನ್ ಚೇಸ್; ವಿಶ್ವ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ – Kannada News | India Shatters T20 World Record: Fastest 200+ Chase Against NZ in Raipur!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನು ಸಹ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 16ನೇ ಓವರ್​ನಲ್ಲೇ ಅಂದರೆ ಕೇವಲ 92 ಎಸೆತಗಳಲ್ಲಿ 209 ರನ್ ಕಲೆಹಾಕಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಇಷ್ಟು ಬೃಹತ್ ಮೊತ್ತವನ್ನು ಬೆನ್ನಟ್ಟಿದ ದಾಖಲೆಯನ್ನು ನಿರ್ಮಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಉತ್ತಮ ಆರಂಭವನ್ನು ಪಡೆಯಿತು. ಡೆವೊನ್ ಕಾನ್ವೇ ಮತ್ತು ಟಿಮ್ ಸೀಫರ್ಟ್ ಪವರ್‌ಪ್ಲೇನಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿದರು. ನಂತರ ರಚಿನ್ ರವೀಂದ್ರ 26 ಎಸೆತಗಳಲ್ಲಿ 44 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ನಾಯಕ ಮಿಚೆಲ್ ಸ್ಯಾಂಟ್ನರ್ ಕೂಡ 27 ಎಸೆತಗಳಲ್ಲಿ ಅಜೇಯ 47 ರನ್ ಗಳಿಸಿದರು. ಗ್ಲೆನ್ ಫಿಲಿಪ್ಸ್ 19 ರನ್ ಮತ್ತು ಡ್ಯಾರಿಲ್ ಮಿಚೆಲ್ 18 ರನ್​ಗಳ ಕಾಣಿಕೆ ನೀಡಿದರು. ಪರಿಣಾಮವಾಗಿ, ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 208 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.

ಮತ್ತೊಂದೆಡೆ, ಭಾರತದ ಪರ ಬೌಲಿಂಗ್​ನಲ್ಲಿ ಮಿಂಚಿದ ಕುಲ್ದೀಪ್ ಯಾದವ್ ಎರಡು ವಿಕೆಟ್‌ಗಳನ್ನು ಪಡೆದರೆ, ಹರ್ಷಿತ್ ರಾಣಾ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು. ಆದಾಗ್ಯೂ, ಅರ್ಷದೀಪ್ ಸಿಂಗ್ ತಮ್ಮ ನಾಲ್ಕು ಓವರ್‌ಗಳಲ್ಲಿ 53 ರನ್‌ಗಳನ್ನು ಬಿಟ್ಟುಕೊಟ್ಟು ವಿಕೆಟ್ ಪಡೆಯದೆ ದುಬಾರಿ ಎನಿಸಿಕೊಂಡರು.

Published On – 10:32 pm, Fri, 23 January 26

Source link

Leave a Reply

Your email address will not be published. Required fields are marked *