ಬೆಂಗಳೂರು, ಆ.13: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಖಂಡಿಸಿ ಹಾಗೂ ನೀರು ಹರಿಸುವುದನ್ನು ತಡೆಯುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಬಲವನ್ನು ನಿಯೋಜಿಸಲಾಗಿದೆ. ಬಂದ್ ಕರೆ ನೀಡಲಾಗಿದ್ದರೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಸಾರ್ವಜನಿಕ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದು, ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸುವುದು ಅಥವಾ ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇಂದಿನಿಂದ ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನವೂ ಆರಂಭ. ಇನ್ನು ಇದರ ಜತೆಗೆ ಸುಪ್ರೀಂ ಕೋರ್ಟ್ನಲ್ಲಿ ತಮಿಳುನಾಡು ಸಲ್ಲಿಸಿರುವ ಕಾವೇರಿ ಅರ್ಜಿ ವಿಚಾರಣೆ ನಡೆಯಲಿದೆ.
