
ದಾವಣಗೆರೆ, ಮಾರ್ಚ್ 23: ದಾವಣಗೆರೆ ನಗರದಲ್ಲಿ ಇಂದು ರಾಜಕೀಯ ಹೈಡ್ರಾಮಾ ನಡೆಯುವ ಸಾಧ್ಯತೆ ತೀವ್ರವಾಗಿದೆ. ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ (Congress) ಟಿಕೆಟ್ ಅಲ್ಪಸಂಖ್ಯಾತರಿಗೆ ಸಿಗದ ಹಿನ್ನೆಲೆ ಅಸಮಾಧಾನ ಭುಗಿಲೆದ್ದಿದ್ದು, ಹಲವು ಅಭ್ಯರ್ಥಿಗಳು ಸ್ವತಂತ್ರವಾಗಿ ಮತ್ತು ಬೇರೆ ಪಕ್ಷಗಳಿಂದ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎಐಎಂಐಎಂ, ಎಸ್ಡಿಪಿಐ, ಆಮ್ ಆದ್ಮಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ವಿಶೇಷವಾಗಿ ಸಮಾಜದ ಮುಖಂಡ ಸಾದಿಕ್ ಪೈಲ್ವಾನ್ ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿರುವುದು ಗಮನ ಸೆಳೆದಿದೆ.
ನಾಮಪತ್ರ ಸಲ್ಲಿಕೆ ಕೊನೆಯ ದಿನ
ಇಂದು (ಮಾರ್ಚ್ 23) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಭಾರೀ ಮೆರವಣಿಗೆಗಳು ನಡೆಯಲಿದ್ದು, ಅದೇ ವೇಳೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದಲೂ ನಾಮಪತ್ರ ಸಲ್ಲಿಕೆ ನಡೆಯಲಿದೆ. ಮಾರ್ಚ್ 22ರಂದು ಅಲ್ಪಸಂಖ್ಯಾತ ಯುವಕರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ‘ಪಾಠ ಕಲಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದರು.
ದಾವಣಗೆರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ರಾಜಕೀಯ ಹೈಡ್ರಾಮಾ ನಡೆಯಬಹುದಾದ ಸಾಧ್ಯತೆ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಮೊಗ್ಗ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಕರೆಯಲಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪ್ರಮುಖ ಸಚಿವರು ದಾವಣಗೆರೆಗೆ
ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಲವು ಮಂದಿ ಸಚಿವರು ಉಪಸ್ಥಿತರಿರಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಿಎಂ, ಡಿಸಿಎಂ ಹಾಗೂ ಸಚಿವರು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಲಿದ್ದಾರೆ. ಬಳಿಕ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ವೇಳೆ ಜತೆಗಿರಲಿದ್ದಾರೆ.
ದಾವಣಗೆರೆ ದಕ್ಷಿಣ ಟಿಕೆಟ್ ಅಂತಿಮಗೊಳಿಸುವ ಮುನ್ನ ಅಲ್ಪಸಂಖ್ಯಾತ ಸಚಿವರು, ಶಾಸಕರನ್ನು ಕರೆದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸುರ್ಜೇವಾಲ ಮನವೊಲಿಸಿದ್ದರು. ಹೀಗಾಗಿ, ಕೊನೇ ಕ್ಷಣದಲ್ಲಿ ಕಣದಿಂದ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುತ್ತಾರೆ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತಾರೆಂಬ ವಿಶ್ವಾಸದಲ್ಲಿ ನಾಯಕರಿದ್ದಾರೆ. ಆದರೆ, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿರುವ ಸಾದಿಕ್ ಪೈಲ್ವಾನ್, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ನೂರಾರು ಬೆಂಬಲಿಗರ ಜೊತೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಬಂಡಾಯ: ಹೈಕಮಾಂಡ್ಗೆ ಪೈಲ್ವಾನ್ ಸವಾಲ್
ಒಟ್ಟಿನಲ್ಲಿ ದಾವಣಗೆರೆ ದಕ್ಷಿಣ ಉಪಚುನಾವಣೆ ಅಖಾಡ ರಂಗೇರಿದ್ದು, ಬಹಳಷ್ಟು ಕುತೂಹಲ ಸೃಷ್ಟಿಸಿದೆ.