ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ ಜೋರು! ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಜುಲೈ 04: ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ ಹಲವೆಡೆ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ.
ಎಲ್ಲೆಲ್ಲಿ ಆರೆಂಜ್ ಅಲರ್ಟ್?
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಈ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಡಲ ತೀರದ ನಿವಾಸಿಗಳು ಹಾಗೂ ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ.
ಎಲ್ಲೆಲ್ಲಿ ಯೆಲ್ಲೋ ಅಲರ್ಟ್?
ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (30-40 ಕಿಮೀ/ಗಂಟೆ) ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲೂ ಸಾಧಾರಣ ಮಳೆ
ಮತ್ತೊಂದೆಡೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ತೇವಾಂಶಭರಿತ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಭಾರಿ ಮಳೆ ಮತ್ತು ಗಾಳಿ ಇರುವ ಕಾರಣ ಸಾರ್ವಜನಿಕರು ದುರ್ಬಲ ಕಟ್ಟಡಗಳು ಹಾಗೂ ವಿದ್ಯುತ್ ಕಂಬಗಳಿಂದ ದೂರವಿರಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ