ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಭಾನುವಾರ ಸುರಿದ ಮಳೆImage Credit source: tv9
ಬೆಂಗಳೂರು, ಆಗಸ್ಟ್ 10: ಕರ್ನಾಟಕದಲ್ಲಿ ತಡವಾಗಿ ಚುರುಕಾಗಿರುವ ಮುಂಗಾರು ಮಳೆ (Monsoon Rain) ಸದ್ಯ ಕಳೆದ ಕೆಲವು ದಿನಗಳಿಂದ ಚುರುಕಾಗಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಇಂದು ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯ ಮುನ್ಸೂಚನೆಯನ್ನು (Weather Forecast) ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಕರಾವಳಿಯಲ್ಲಿ ಮಳೆ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಬಹುತೇಕ ಕಡೆ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಬಹುತೇಕ ಕಡೆ ಮಳೆಯಾಗಿದೆ. ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯ ಮುನ್ಸೂಚನೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 11ರಂದು ಹೇಗಿರಲಿದೆ ಮಳೆ?
ಆಗಸ್ಟ್ 11ರಂದು ಕೂಡ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರಿ ಮಳೆ
ಭಾನುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 9 ಸೆಂ.ಮೀ. ಮಳೆ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ 6 ಸೆಂ.ಮೀ. ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 5 ಸೆಂ.ಮೀ. ಮಳೆ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಧಾರಿಸಿದ ಗಾಳಿ, ಇತರ ನಗರಗಳ ಸ್ಥಿತಿ ಹೇಗಿದೆ?
ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿತ್ತು. ಕರಾವಳಿಯಲ್ಲಿ ಬಹುತೇಕ ಕಡೆ, ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಳೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ