ಬೆಂಗಳೂರು (ಮೇ 22): ಕರ್ನಾಟಕದಲ್ಲಿ (Karnataka) ಮುಂಗಾರು ಪೂರ್ವ ಮಾರುತಗಳು (Pre Monsoon Rain) ತೀವ್ರಗೊಂಡಿದ್ದು, ಮೇ 22 ರಿಂದ ಮುಂದಿನ ಐದಾರು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮಾಲ್ಡೀವ್ಸ್ ಮತ್ತು ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಮುನ್ನಡೆಯಲು ಪೂರಕ ವಾತಾವರಣವಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು, ಸಿಡಿಲು ಹಾಗೂ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ .
ಯಾವಾಗ ಎಲ್ಲೆಲ್ಲಿ ಮಳೆ?
ಮೇ 23 ರಂದು ಬಾಗಲಕೋಟೆ, ಕೊಪ್ಪಳ, ವಿಜಯಪುರ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಮೇ 24 ರಂದು ತುಮಕೂರು, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ. ಮೇ 25 ಮತ್ತು 26 ರಂದು ಮಳೆಯ ತೀವ್ರತೆ ಕೊಂಚ ಕಡಿಮೆಯಾಗಲಿದ್ದರೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಇದನ್ನೂ ನೋಡಿ: ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ಇನ್ನು ಮೇ 27 ಮತ್ತು 28 ರಂದು ಕರಾವಳಿಯ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದೆ. ಇನ್ನು ರಾಜ್ಯದ ಗರಿಷ್ಠ ತಾಪಮಾನದಲ್ಲಿ ಮುಂದಿನ 5 ದಿನಗಳವರೆಗೆ ಯಾವುದೇ ಪ್ರಮುಖ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡು
ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ವರುಣನ ಅಬ್ಬರ ಹೆಚ್ಚಿರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಿಡಿಲು ಮತ್ತು ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಜಾಗರೂಕರಾಗಿರಲು ಸೂಚಿಸಲಾಗಿದೆ.
ಉತ್ತರ ಒಳನಾಡು
ಬೆಳಗಾವಿ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ವಿಜಯಪುರ, ರಾಯಚೂರು, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಕರಾವಳಿ ಕರ್ನಾಟಕ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಮತ್ತು ಕೊಡಗು ಜಿಲ್ಲೆಗಳ ಹಲವು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಚದುರಿದಂತೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉರಿ ಸೆಖೆಯ ವಾತಾವರಣ ಮುಂದುವರಿಯಲಿದ್ದು, ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ.
