ಬೆಂಗಳೂರು, ಜುಲೈ 07: ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ (Monsoon Rain) ಮತ್ತಷ್ಟು ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ತೀರದಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ?
ಮಳೆಯ ತೀವ್ರತೆಯನ್ನು ಆಧರಿಸಿ ಹವಾಮಾನ ಇಲಾಖೆಯು ಜಿಲ್ಲಾವಾರು ಅಲರ್ಟ್ಗಳನ್ನು ಪ್ರಕಟಿಸಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರೊಂದಿಗೆ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ವರದಿ
ಕರಾವಳಿಯ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಕಡೆಗಳಲ್ಲಿ ಗಾಳಿಯ ವೇಗದೊಂದಿಗೆ ಅತ್ಯಂತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ 50-60 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ ಜಿಲ್ಲೆಯಲ್ಲಿ ಅತಿ ಭಾರಿ ಮಳೆಯಾಗಲಿದ್ದರೆ, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಹಾವೇರಿ, ವಿಜಯಪುರ, ಕಲಬುರಗಿ, ರಾಯಚೂರು, ಬಾಗಲಕೋಟೆ, ಬೀದರ್, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಇದನ್ನೂ ಓದಿ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ: ಇಂದು ಎಲ್ಲೆಲ್ಲಿ ಶಾಲೆಗಳಿಗೆ ರಜೆ? ಇಲ್ಲಿದೆ ಪೂರ್ತಿ ವಿವರ
ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ 40 ರಿಂದ 60 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ