IPL 2026: ಟಿ20 ಲೀಗ್ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಮತ್ಯಾರೂ ಅಲ್ಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB). ಅದು ಕೂಡ ವಿಸ್ಫೋಟಕ ಬ್ಯಾಟಿಂಗ್ನೊಂದಿಗೆ 200+ ರನ್ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ವಿಶೇಷ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2026ರ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತ್ತು.
202 ರನ್ಗಳ ಕಠಿಣ ಗುರಿ ಪಡೆದ ಆರ್ಸಿಬಿ ಪರ ವಿರಾಟ್ ಕೊಹ್ಲಿ (69), ದೇವದತ್ ಪಡಿಕ್ಕಲ್ (61), ರಜತ್ ಪಾಟಿದಾರ್ (31) ಅಬ್ಬರಿಸಿದರು. ಈ ಅಬ್ಬರದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 15.4 ಓವರ್ಗಳಲ್ಲಿ 203 ರನ್ಗಳಿಸಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಭರ್ಜರಿ ಜಯದೊಂದಿಗೆ ಟಿ20 ಲೀಗ್ ಕ್ರಿಕೆಟ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 200+ ರನ್ಗಳ ಗುರಿ ಬೆನ್ನತ್ತಿ ಗೆದ್ದ ತಂಡವೆಂಬ ವಿಶ್ವ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ರಾಜಸ್ಥಾನ್ ರಾಯಲ್ಸ್ ತಂಡದ ಹೆಸರಿನಲ್ಲಿತ್ತು.
2025ರ ಐಪಿಎಲ್ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 15.5 ಓವರ್ಗಳಲ್ಲಿ 210 ರನ್ಗಳನ್ನು ಚೇಸ್ ಮಾಡಿದ್ದರು. ಈ ಮೂಲಕ ಟಿ20 ಲೀಗ್ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 200+ ರನ್ ಚೇಸ್ ಮಾಡಿದ ವಿಶ್ವ ದಾಖಲೆ ನಿರ್ಮಿಸಿದ್ದರು.
ಇದೀಗ ಈ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಾಂಡಿಗರು ಅಳಿಸಿ ಹಾಕಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 15.4 ಓವರ್ಗಳಲ್ಲಿ 203 ರನ್ ಬಾರಿಸುವ ಮೂಲಕ ಆರ್ಸಿಬಿ, ಟಿ20 ಲೀಗ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 200+ ರನ್ ಚೇಸ್ ಮಾಡಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.





