ಬೆಂಗಳೂರು, ಮೇ.6; ದೇಶದ ರಾಜಕಾರಣದಲ್ಲಿ ದೊಡ್ಡಮಟ್ಟದ ಬದಲಾವಣೆಗಳು ಕಂಡು ಬಂದಿದೆ. ಪಂಚ ರಾಜ್ಯಗಳ ಚುನಾವಣೆಯ ನಂತರ ರಾಜಕೀಯದಲ್ಲಿ ಭಾರೀ ಸಂಚಲ ಮೂಡಿಸಿದೆ. ಇನ್ನು ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಸಾಧ್ಯ ಇದೆ ಎಂದು ಹೇಳಲಾಗಿದೆ. ಮಠದ ಹಾಸ್ಟೆಲ್ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರಿಗೆ ದಾವಣಗೆರೆ ವಿಶೇಷ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಿಲಿಕಾನ್ ಸಿಟಿ ಸೇರಿದಂತೆ ಕರ್ನಾಟಕದಾದ್ಯಂತ ಬೇಸಿಗೆಯ ತಾಪಮಾನ ಏರುತ್ತಿದ್ದಂತೆ ನಾಯಿಗಳ ವರ್ತನೆಯಲ್ಲಿ ಆಕ್ರಮಣಶೀಲತೆ ಕಂಡುಬರುತ್ತಿದೆ. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಡಿತದ ಪ್ರಕರಣಗಳು ವರದಿಯಾಗಿದೆ. ಇದರೆಲ್ಲದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ವಚನಾನಂದ ಶ್ರೀಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು:
ಮಠದ ಹಾಸ್ಟೆಲ್ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರಿಗೆ ದಾವಣಗೆರೆ ವಿಶೇಷ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಹಾಸ್ಟೆಲ್ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಮಠದಲ್ಲಿದ್ದ ಮೂವರು ಮಕ್ಕಳು ಮಕ್ಕಳ ಕಲ್ಯಾಣ ಸಮಿತಿ (CWC) ಮುಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಚನಾನಂದ ಶ್ರೀಗಳು ಹಾಗೂ ಅವರ ಬೆಂಬಲಿಗರ ವಿರುದ್ಧ ದೌರ್ಜನ್ಯದ ಆರೋಪ ಕೇಳಿಬಂದಿತ್ತು. ಬಂಧನದ ಭೀತಿಯಲ್ಲಿದ್ದ ಶ್ರೀಗಳು ಏಪ್ರಿಲ್ 21ರಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಾಲಯವು ಶ್ರೀಗಳಿಗೆ ಹಲವು ಕಠಿಣ ಷರತ್ತುಗಳನ್ನು ವಿಧಿಸಿದೆ. ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು. ನ್ಯಾಯಾಲಯದ ಪೂರ್ವ ಅನುಮತಿ ಇಲ್ಲದೆ ವ್ಯಾಪ್ತಿಯನ್ನು ಬಿಟ್ಟು ಹೋಗಬಾರದು.
ತಮಿಳುನಾಡಿನಲ್ಲಿ ಹೊಸ ಮೈತ್ರಿ: ದಶಕದ ಬಳಿಕ ಕೇರಳಂನಲ್ಲಿ ‘ಕೈ’ ಪರ್ವ
ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳದಲ್ಲಿ ರಾಜಕೀಯ ಸಮೀಕರಣಗಳು ಸಂಪೂರ್ಣವಾಗಿ ಬದಲಾಗಿವೆ. ತಮಿಳುನಾಡಿನಲ್ಲಿ ನಟ ವಿಜಯ್ ಅವರ ಚೊಚ್ಚಲ ಚುನಾವಣಾ ಯಶಸ್ಸು ಮತ್ತು ಕೇರಳದಲ್ಲಿ ಕಾಂಗ್ರೆಸ್ನ ಐತಿಹಾಸಿಕ ಪುನರಾಗಮನ ಈ ಬಾರಿಯ ವಿಶೇಷ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಭರ್ಜರಿ ಜಯ ಗಳಿಸಿದ್ದರೂ, ಬಹುಮತಕ್ಕೆ ಕೆಲವು ಸ್ಥಾನಗಳ ಕೊರತೆಯಿತ್ತು. ಇದೀಗ ಕಾಂಗ್ರೆಸ್ ತನ್ನ 5 ಸ್ಥಾನಗಳ ಬೆಂಬಲವನ್ನು ಘೋಷಿಸಿದ್ದು, ವಿಜಯ್ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ಪ್ರತಿಯಾಗಿ ಕಾಂಗ್ರೆಸ್ 2 ಸಚಿವ ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ. ಕೇರಳದಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ (LDF) ಪತನಗೊಂಡಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿದೆ. ಪಿಣರಾಯಿ ವಿಜಯನ್ ಸರ್ಕಾರದ ವಿರುದ್ಧವಿದ್ದ ಆಡಳಿತ ವಿರೋಧಿ ಅಲೆ, ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟುಗಳು ಎಲ್ಡಿಎಫ್ ಸೋಲಿಗೆ ಪ್ರಮುಖ ಕಾರಣಗಳಾಗಿವೆ.
ರಾಜ್ಯದಲ್ಲಿ ಮಿತಿಮೀರಿದ ಬೀದಿ ನಾಯಿ ಹಾವಳಿ
ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯಾದ್ಯಂತ ಬೇಸಿಗೆಯ ಬಿಸಿಲಿಗೆ ನಾಯಿಗಳ ವರ್ತನೆಯಲ್ಲಿ ತೀವ್ರ ಆಕ್ರಮಣಶೀಲತೆ ಕಂಡುಬರುತ್ತಿದೆ. ಕಳೆದ ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಡಿತದ ಪ್ರಕರಣಗಳು ವರದಿಯಾಗಿದ್ದು, 25 ಜನರು ರೇಬೀಸ್ ಸೇರಿದಂತೆ ವಿವಿಧ ಕಾರಣಗಳಿಂದ ಸಾವನ್ನಪ್ಪಿದ್ದಾರೆ. ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ‘ಹೈ ಅಲರ್ಟ್’ ಘೋಷಿಸಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬೀಸ್ ವಿರೋಧಿ ಲಸಿಕೆ (ARV) ಮತ್ತು ಇಮ್ಯುನೊಗ್ಲೋಬ್ಯುಲಿನ್ ಲಸಿಕೆಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇರಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 9:32 am, Wed, 6 May 26